ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯಲ್ಲಿ ನಡೆದಿರುವ ನಕಲಿ ಮತದಾನವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಹಳೇ ಪಿ.ಬಿ. ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯರ್ತರು ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ನಕಲಿ ಮತದಾನವನ್ನು ಖಂಡಿಸಿ, ಪ್ರತಿಭಟಿಸಿದ ಕಾರ್ಯಕರ್ತರು “ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹಾಗೂ ಮತಗಟ್ಟೆ ಅಧಿಕಾರಿಗಳ ಕುಮ್ಮಕ್ಕಿನಿಂದ ನಕಲಿ ಮತದಾನ ಆಗಿದೆ. ಹೀಗಾಗಿ ಸಚಿವರು ರಾಜೀನಾಮೆ ನೀಡಬೇಕು. ಮತಗಟ್ಟೆಯ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.
“ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಪತ್ನಿ ಆಶಾ ಪಾಟೀಲ ಅವರ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶಿಲ್ಪಾ ಬಡಮ್ಮನವರ ಅವರು ನಕಲಿ ಮತದಾನ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಪ್ರವೇಶ ದ್ವಾರದ ಬಳಿಯೇ ತಡೆದು ನಿಲ್ಲಿಸಿದರು. ಇದರಿಂದ ಪರಸ್ಪರ ಮಾತಿನ ಚಕಮಕಿ ನಡೆಯಿತು.

ಮುತ್ತಿಗೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ಕಚೇರಿಯೊಳಗೆ ಕಲ್ಲು ಎಸೆದಿದ್ದಾರೆ. ಇದರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ನಂತರ, ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈಗ, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸಭೆ ಮಾಡುತ್ತಿದ್ದಾರೆ.








