- ಜೆಡಿಎಸ್‌ನತ್ತ ಮುಖಮಾಡಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್
- ಬ್ಯಾಡಗಿ ಕ್ಷೇತ್ರದ ಆಕಾಂಕ್ಷಿ ಎಸ್.ಆರ್ ಪಾಟೀಲ್ ನಡೆ ನಿಗೂಢ
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಹಾವೇರಿ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಎಂ.ಎಂ. ಹಿರೇಮಠ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.
ಬೇಡ ಜಂಗಮ ಜಾತಿ ಅಡಿಯಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಹಾವೇರಿ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧಿಸಲು ಎಂ.ಎಂ. ಹಿರೇಮಠ ತೀರ್ಮಾನಿಸಿದ್ದರು. ಆದರೆ, ಅವರಿಗೆ ಟಿಕೆಟ್ ತಪ್ಪಿಸಿ, ಮಾಜಿ ಸಚಿವ ರುದ್ರಪ್ಪ ಲಮಾಣಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ಅವರು ಅಸಮಾಧಾನಗೊಂಡು ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಅಲ್ಲದೆ, ಬೆಂಬಲಿಗರ ಸಭೆ ಕರೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು, ಕಳೆದ 50 ವರ್ಷಗಳಿಂದ ಪಕ್ಷದಲ್ಲಿರುವ ಹಿರಿಯ ರಾಜಕಾರಣಿ, ಮಾಜಿ ಸಚಿವ ಮನೋಹರ ತಹಶೀಲ್ದಾರ್ ಅವರಿಗೆ ಹಾನಗಲ್ ಟಿಕೆಟ್ ಕೈ ತಪ್ಪುತ್ತಿದ್ದು, ಅವರೂ ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿ, ಆ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ?: ಏ. 20ರವರೆಗೆ ಪಂಚರತ್ನ ರಥಯಾತ್ರೆ : ಕಾಂಗ್ರೆಸ್-ಬಿಜೆಪಿ 70 ಸ್ಥಾನ ದಾಟುವುದಿಲ್ಲ ಎಂದ ಕುಮಾರಸ್ವಾಮಿ
ಮನೋಹರ ತಹಶೀಲ್ದಾರ್ ಅವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ತಿಂಗಳ ಕೊನೆಯಲ್ಲಿ ಬೆಂಬಲಿಗರ ಸಭೆ ನಡೆಸಿ, ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಡಗಿ ಕ್ಷೇತ್ರದಲ್ಲಿ ಬಿಜೆಪಿಯ ವಿರೂಪಾಕ್ಷಪ್ಪ ಬಳ್ಳಾರಿ ವಿರುದ್ಧ ಸೋತಿದ್ದ ಎಸ್.ಆರ್ ಪಾಟೀಲ್ ಈ ವರ್ಷ ಮತ್ತೊಮ್ಮೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ, 2018ರ ವಿಧಾನಸಭಾ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದ ಶಿವಣ್ಣನವರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಹೀಗಾಗಿ, ಎಸ್.ಆರ್ ಪಾಟೀಲ್‌ಕೂಡ ಅಸಮಾಧಾನಗೊಂಡಿದ್ದು, ಬೆಂಬಲಿಗರ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇದಷ್ಟು ಮಾತ್ರವಲ್ಲದೇ ರಾಣೇಬೆನ್ನೂರಿನಿಂದ ಪ್ರಕಾಶ್ ಕೋಳಿವಾಡ ಹಾಗೂ ಹಿರೇಕೆರೂರಿನಿಂದ ಯು.ಬಿ ಬಣಕಾರ ಅವರನ್ನು ಕಣಕ್ಕಿಳಿಸಿರುವುದರಿಂದ ಹಲವು ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಈ ಎಲ್ಲರ ಬಂಡಾಯವನ್ನು ಕಾಂಗ್ರೆಸ್ ಹೈಕಮಾಂಡ್ ಹೇಗೆ ಶಮನ ಮಾಡುತ್ತದೆ ಎನ್ನುವುದನ್ನು ಕಾದುನೋಡಬೇಕಾಗಿದೆ.