ಹಾವೇರಿಯ ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಐದು ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಪಟಾಕಿ ಗೋದಾಮಿಗೆ ಬೆಂಕಿ ಬಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟಿಯಲ್ಲಿ ನಡೆದಿದೆ. ಪಟಾಕಿ ಗೋದಾಮಿನ ಮಾಲೀಕನನ್ನು ಹಾವೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮಂಗಳವಾರ ಮಧ್ಯಾಹ್ನದ ವೇಳೆಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ದ್ಯಾಮಪ್ಪ, ರಮೇಶ್ ಬಾರ್ಕಿ, ಶಿವಲಿಂಗ ಅಕ್ಕಿ, ಜಯಣ್ಣ ಎಂದು ಗುರುತಿಸಲಾಗಿದೆ.
ಮುಂದಿನ ತಿಂಗಳು ಗಣೇಶ ಚತುರ್ಥಿ ಇದ್ದುದರಿಂದ ಗೋದಾಮಿನಲ್ಲಿ ಪಟಾಕಿಗಳನ್ನು ದಾಸ್ತಾನು ಮಾಡಲಾಗಿತ್ತು. ಈ ನಡುವೆ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪಟಾಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಗೋದಾಮಿನ ಬಳಿ ವೆಲ್ಡಿಂಗ್ ಕೆಲಸ ನಡೆಯುತ್ತಿತ್ತು. ವೆಲ್ಡಿಂಗ್ ಮಾಡುವಾಗ ಸಿಡಿದ ಬೆಂಕಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.