ಹಾವೇರಿ ನಗರದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಜೋರು ಮಳೆಯಾಗಿದ್ದು, ದೊಡ್ಡ ಕಾಲುವೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋಗಿದ್ದ 10 ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದೆ.
ನಗರದ ಹಳೇ ಪಿ ಬಿ ರಸ್ತೆಗೆ ಹೊಂದಿಕೊಂಡಿರುವ ಶಿವಾಜಿನಗರದ 3ನೇ ಕ್ರಾಸ್‌ನಲ್ಲಿರುವ ಕಾಲುವೆಯಲ್ಲಿ ಬಾಲಕ ನಿವೇದನ್ ಕೊಚ್ಚಿಕೊಂಡು ಹೋಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಹಾಗೂ ನಗರಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸ್ಥಳೀಯ ನಿವಾಸಿ ನಿವೇದನ್ ಮನೆ ಎದುರು ಓಡಾಡುತ್ತಿದ್ದ. ಇದೇ ಸಂದರ್ಭದಲ್ಲಿ ಜೋರು ಮಳೆ ಇತ್ತು. ಕಾಲುವೆಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಆಯತಪ್ಪಿ ಕಾಲುವೆಗೆ ಬಿದ್ದು ನಿವೇದನ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಹೆಚ್ಚುವರಿ ಎಸ್‌ಪಿ ಶಿರಕೋಳ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನಾ ಸ್ಥಳದಲ್ಲಿ ನಿವೇದನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಮ್ಮ ಮಗನನ್ನು ಹುಡುಕಿಕೊಡುವಂತೆ ಗೋಗರೆಯುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಮಳೆಯಿಂದ ಬೆಳೆಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ
ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಲಕನಿಗಾಗಿ ಹುಡುಕಾಟ ನಡೆಸಿದ್ದರು. ಕಾರ್ಯಾಚರಣೆ ಅಂತ್ಯದಲ್ಲಿ ಕಾಲುವೆಯಲ್ಲಿಯೇ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಘಟನೆಯ ಮಾಹಿತಿ ಅರಿತು, ಜಿಲ್ಲಾಸ್ಪತ್ರೆ ಎದುರು ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ.