ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದ ಕೋಮು ಗಲಭೆಯಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ನಾಗರಾಜ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿತು.
ಈ ವೇಳೆ ಗಾಯಾಳುಗಳಿಗೆ ಧೈರ್ಯ ತುಂಬಿದ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳು, “ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಗಾಯಾಳುಗಳಿಗೆ ಸೂಕ್ತ ನ್ಯಾಯ ಒದಗಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ನಿರಪರಾಧಿಗಳಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ ಅಶೋಕ ಬಣಕಾರ, ನಿರ್ದೇಶಕ ಬಸವರಾಜ ಕಂಬಳಿ, ರಾಜೇಂದ್ರ ಹಾವೇರಣ್ಣನವರ ಸೇರಿದಂತೆ ಸಂಘದ ಹಲವಾರು ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.




