“ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಕಳೆದ 20 ದಿನಗಳಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದಿರುವ ಕ್ರಮವನ್ನು ಭಾರತದ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದ್ದಾರೆ.
ಹಾವೇರಿ ಪಟ್ಟಣದಲ್ಲಿ ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, “ಸೋನಂ ಅವರ ಶಾಂತಿಯುತ ಉಪವಾಸ ಸತ್ಯಾಗ್ರಹದ ಇಪ್ಪತ್ತು ದಿನಗಳ ನಂತರ ನಡೆದಿರುವ ಈ ಅಧಿಕಾರ ದುರುಪಯೋಗದ ಕ್ರಮವು ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಹಾಗೂ ಶಾಂತಿಯುತ ಪ್ರತಿಭಟನೆಯ ಸಂವಿಧಾನಬದ್ಧ ಹಕ್ಕಿನ ಮೇಲಿನ ನಾಚಿಕೆಗೇಡಿನ ದಾಳಿಯಾಗಿದೆ” ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
“ಕಳೆದ ಇಪ್ಪತ್ತು ದಿನಗಳಿಂದ ಸೋನಂ ವಾಂಗ್ಚುಕ್ ಅವರು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಅವರ ಬೇಡಿಕೆಗಳಿಗೆ ಬೆಂಬಲ ಸೂಚಿಸಿ ಅನೇಕ ವಿದ್ಯಾರ್ಥಿಗಳೂ ಸಹ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದರು. ಪ್ರತಿಭಟನಾಕಾರರೊಂದಿಗೆ ಶಾಂತಿಯುತ ಹಾಗೂ ಪ್ರಜಾಸತ್ತಾತ್ಮಕ ಸಂವಾದ ನಡೆಸುವ ಬದಲು, ಕೇಂದ್ರ ಸರ್ಕಾರವು ಪೊಲೀಸ್ ಕ್ರಮದ ಮೂಲಕ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಮಾರ್ಗವನ್ನು ಆರಿಸಿಕೊಂಡಿರುವುದು ಆತಂಕಕಾರಿ” ಎಂದು ತಿಳಿಸಿದ್ದಾರೆ.
“ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆಯುವುದು ನಮ್ಮ ದೇಶದ ಪ್ರಜಾಸತ್ತಾತ್ಮಕ ಪರಂಪರೆಗೆ ಕಪ್ಪು ಚುಕ್ಕೆಯಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಬದ್ಧವಾಗಿರುವ ಸರ್ಕಾರವು ಶಾಂತಿಯುತ ಪ್ರತಿಭಟನೆಗಳಿಗೆ ಸಂವಾದ ಮತ್ತು ಹೊಣೆಗಾರಿಕೆಯ ಮೂಲಕ ಸ್ಪಂದಿಸಬೇಕು. ಬಲಪ್ರಯೋಗ ಮತ್ತು ಬೆದರಿಕೆಯ ಮೂಲಕವಲ್ಲ. ಭಿನ್ನಾಭಿಪ್ರಾಯಗಳನ್ನು ಮಣಿಸಲು ಪೊಲೀಸ್ ಬಲವನ್ನು ಹೆಚ್ಚಾಗಿ ಬಳಸುತ್ತಿರುವುದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ದುರ್ಬಲಗೊಳಿಸುವ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋನಂ ವಾಂಗ್ಚುಕ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಡಿವೈಎಫ್ಐ ಆಗ್ರಹಿಸುತ್ತದೆ. ಅಲ್ಲದೆ, ದಮನದ ಮಾರ್ಗವನ್ನು ಅನುಸರಿಸುವ ಬದಲು ಪ್ರತಿಭಟನಾಕಾರರೊಂದಿಗೆ ಅರ್ಥಪೂರ್ಣ ಸಂವಾದ ನಡೆಸುವಂತೆ ಸರ್ಕಾರವನ್ನು ಡಿವೈಎಫ್ಐ ಒತ್ತಾಯಿಸುತ್ತದೆ” ಎಂದು ತಿಳಿಸಿದ್ದಾರೆ.





