“ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಪ್ರೋತ್ಸಾಹಿಸಬೇಕು” ಎಂದು ಸಕ್ಕರೆ ಮತ್ತು ಜವಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.
ಹಾವೇರಿ ನಗರದ ಜಿಲ್ಲಾ ವಾಲ್ಮೀಕಿ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ನಮ್ಮ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ನೆರವು ನೀಡುತ್ತಿದೆ. ಅಂಬೇಡ್ಕರ್ ಭವನ ಸೇರಿದಂತೆ ಸಮುದಾಯದ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದೆ. ಸರ್ಕಾರದಿಂದ ದೊರೆಯುವ ಶಿಕ್ಷಣ ಮತ್ತು ತರಬೇತಿ ಸೌಲಭ್ಯಗಳನ್ನು ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕು. ವಿಶೇಷವಾಗಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳಿಗೆ ಐಎಎಸ್, ಐಪಿಎಸ್ ಪರೀಕ್ಷೆಗಳ ಮಹತ್ವದ ಕುರಿತು ತಿಳಿ ಹೇಳಿ ಅವರಿಗೆ ಅಂತಹ ಪರೀಕ್ಷೆಗಳ ತರಬೇತಿ ಕಾರ್ಯಕ್ರಮಗಳ ಅರಿವು ಮೂಡಿಸಬೇಕು” ಎಂದರು.
“ಜಯಂತಿಗಳ ಆಚರಣೆಗಳು ಕೇವಲ ಮೆರವಣಿಗೆಗಳಿಗೆ ಸೀಮಿತವಾಗದೆ. ವಾಲ್ಮೀಕಿ ರಾಮಾಯಣವನ್ನು ಓದುವ ಮತ್ತು ಅದರ ಆದರ್ಶಗಳನ್ನು ಜೀವನದಲ್ಲಿ ಪಾಲಿಸುವ ಮೂಲಕ ಮಹರ್ಷಿಯವರ ಆಶಯಗಳಿಗೆ ಗೌರವ ಸಲ್ಲಿಸಬೇಕು” ಎಂದು ಹೇಳಿದರು.
ರಾಣೆಬೆನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ. ಹೊನ್ನಪ್ಪ ಹೊನ್ನಮ್ಮನವರ ಅವರು ಮಹರ್ಷಿ ವಾಲ್ಮೀಕಿಯವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.
ನಗರದ ವಾಲ್ಮೀಕಿ ವೃತ್ತದಿಂದ ಜಿಲ್ಲಾ ವಾಲ್ಮೀಕಿ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ವಿವಿಧ ಕಲಾತಂಡಗಳು, ಡೊಳ್ಳು ಹಾಗೂ ನೃತ್ಯ ತಂಡಗಳ ಪ್ರದರ್ಶನ ಮೆರವಣಿಗೆಗೆ ಮೆರುಗು ನೀಡಿದವು.
ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಹಾಜನಹಳ್ಳಿಯ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಮರಗಡಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಕ್ಷಿತ್ ಕುಮಾರ್. ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ತಹಶೀಲ್ದಾರ್ ಶರಣಮ್ಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ. ಮಂಜಾನಾಯ್ಕ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸಗೆಣ್ಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.




