ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ ಎರಡು ತಿಂಗಳಿಂದ ಹೋರಾಟ ಮಾಡಲಾಗುತ್ತಿದ್ದರೂ ಜಿಲ್ಲೆಯ ಕಾರ್ಖಾನೆಯವರು ಕಬ್ಬು ನೂರಿಸಲು ಪ್ರಾರಂಭಿಸಿದ್ದು, ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಬ್ಬು ಬೆಳೆಗಾರರು, ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಾವೇರಿ ಜಿಲ್ಲೆಯ ಸಂಗೂರು ಹಾಗೂ ಬೈರನಪಾದದಲ್ಲಿರುವ ಕಾರ್ಖಾನೆಯಲ್ಲಿ ಜಿ.ಎಂ. ಶುಗರ್ಸ್ ಕಂಪನಿಯವರು ಕಬ್ಬು ನೂರಿಸುತ್ತಿದ್ದಾರೆ. ಕಾರ್ಖಾನೆಗೆ ಕಬ್ಬು ನುರಿಸಲು ಹೊರಟಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಅಡ್ಡಗಟ್ಟಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿ, ಕಬ್ಬು ತುಂಬಿದ ಅದೇ ಟ್ರ್ಯಾಕ್ಟರ್‌ಗಳನ್ನು ಸಚಿವರ ಮನೆ ಮುಂದೆ ನಿಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಬ್ಬು ನುರಿಸಲು ಆರಂಭಿಸಿದ ಕಾರ್ಖಾನೆಗಳನ್ನು ಬಂದ್ ಮಾಡಬೇಕು. ಅಲ್ಲಿಯವರೆಗೂ ನಾವು ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ರೈತರು ಬಿಗಿಪಟ್ಟು ಹಿಡಿದಿದ್ದಾರೆ.
“ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಸಚಿವ ರುದ್ರಪ್ಪ ಲಮಾಣಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಕಾರ್ಖಾನೆ ಶುರು ಮಾಡುವುದಿಲ್ಲವೆಂದು ಭರವಸೆ ನೀಡಿದ್ದರು. ಈಗ ಏಕಾಏಕಿ ಕಾರ್ಖಾನೆ ಆರಂಭಿಸಿದ್ದಾರೆ. ಕೂಡಲೇ ಆರಂಭಿಸಿದ ಕಾರ್ಖಾನೆಗಳನ್ನು ಬಂದ್ ಮಾಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.





