ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದ ವತಿಯಿಂದ 2024–25ನೇ ಸಾಲಿನಲ್ಲಿ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಹಾವೇರಿ ವಿಶ್ವವಿದ್ಯಾಲಯದ ವ್ಯಾಪ್ತಿಯ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಶಮಂತ್ ಕುಮಾರ್ ಕೆ.ಎಸ್. ಅವರು ಆಯ್ಕೆಯಾಗಿದ್ದಾರೆ.
ಇವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಿದ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕವು ರಾಜ್ಯಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಘಟಕ ಪ್ರಶಸ್ತಿಗೂ ಆಯ್ಕೆಯಾಗಿದ್ದು, ಮಹಾವಿದ್ಯಾಲಯಕ್ಕೆ ಏಕಕಾಲದಲ್ಲಿ ಎರಡು ರಾಜ್ಯಮಟ್ಟದ ಪ್ರಶಸ್ತಿಗಳ ಗೌರವ ದೊರೆತಿದೆ.
ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರ ಸಮ್ಮುಖದಲ್ಲಿ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು. ರಾಜ್ಯದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸುವ ಈ ಗೌರವವು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಮೂರು ವರ್ಷಗಳ ಸಮಾಜಮುಖಿ ಸೇವಾ ಕಾರ್ಯಗಳಿಗೆ ಮತ್ತಷ್ಟು ಮಹತ್ವ ತಂದುಕೊಟ್ಟಿದೆ.
2022–23, 2023–24 ಹಾಗೂ 2024–25ನೇ ಸಾಲಿನ ಮೂರು ವರ್ಷಗಳ ಎನ್‌ಎಸ್‌ಎಸ್ ಚಟುವಟಿಕೆಗಳು, ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ವಿದ್ಯಾರ್ಥಿಗಳ ನಾಯಕತ್ವ ವಿಕಸನ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಸಂಘಟನೆಯ ಆಧಾರದ ಮೇಲೆ ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಎನ್‌ಎಸ್‌ಎಸ್ ಘಟಕದ ಮೂಲಕ 1,500ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಪರಿಸರ ಜಾಗೃತಿ ಕಾರ್ಯಕ್ರಮ, ರಕ್ತದಾನ ಶಿಬಿರ, ಏಡ್ಸ್ ಜಾಗೃತಿ, ಆರೋಗ್ಯ ಶಿಬಿರ, ಪಶು ಆರೋಗ್ಯ ಶಿಬಿರ, ಮತದಾನ ಜಾಗೃತಿ, ಬಾಲ್ಯವಿವಾಹ ತಡೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಪೋಕ್ಸೋ ಕಾಯ್ದೆ ಅರಿವು, ವಯಸ್ಕರ ಶಿಕ್ಷಣ, ಮಾನಸಿಕ ಆರೋಗ್ಯ ಜಾಗೃತಿ, ಸೈಬರ್ ಅಪರಾಧಗಳ ತಿಳುವಳಿಕೆ, ಭ್ರಷ್ಟಾಚಾರ ನಿರ್ಮೂಲನೆ, ಓಜೋನ್ ಪದರ ಸಂರಕ್ಷಣೆ, ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಮಳೆನೀರು ಕೊಯ್ಲು ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಲಾಗಿದೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಕನ್ನಡ ಶಾಲೆಗಳ ಉಳಿವಿನ ಆಶಯದೊಂದಿಗೆ ‘ಕನ್ನಡ ಶಾಲೆಗೆ ಬಣ್ಣ’ ಎಂಬ ವಿನೂತನ ಕಾರ್ಯಕ್ರಮದಡಿ ಐದು ಸರ್ಕಾರಿ ಶಾಲೆಗಳಿಗೆ ಬಣ್ಣ ಬಳಿದು, ಎನ್‌ಎಸ್‌ಎಸ್ ಸ್ವಯಂಸೇವಕರಿಂದ ವರ್ಲಿ ಕಲೆಯನ್ನು ಮೂಡಿಸಿ ಶಾಲೆಗಳಿಗೆ ಹೊಸ ಮೆರುಗು ನೀಡಲಾಗಿದೆ. ಹಾವೇರಿ ನಗರದ ವಿವಿಧ ಪ್ರದೇಶಗಳಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಹೆಣ್ಣು ಭ್ರೂಣಹತ್ಯೆ ವಿರುದ್ಧ ಜಾಗೃತಿ ಮೂಡಿಸುವ ಗೋಡೆ ಬರಹಗಳನ್ನು ರಚಿಸಿ ಸಾಮಾಜಿಕ ಸಂದೇಶ ಸಾರಲಾಗಿದೆ. ವಿಶ್ವ ಆಹಾರ ದಿನದಂದು ಪ್ರತಿವರ್ಷ ಅನಾಥಾಶ್ರಮಗಳಿಗೆ ಆಹಾರ ವಿತರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಹಾನುಭೂತಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವೂ ನಿರಂತರವಾಗಿ ನಡೆದಿದೆ.
ಡಾ. ಶಮಂತ್ ಕುಮಾರ್ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಹಾವಿದ್ಯಾಲಯದ ಮೂವರು ಎನ್‌ಎಸ್‌ಎಸ್ ಸ್ವಯಂಸೇವಕರು ರಾಷ್ಟ್ರಮಟ್ಟದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದು, ಇಬ್ಬರು ಸ್ವಯಂಸೇವಕರು ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ, ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತಾ ಶಿಬಿರ, ರಾಷ್ಟ್ರಮಟ್ಟದ, ರಾಜ್ಯಮಟ್ಟದ ಹಾಗೂ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವ ಹಾಗೂ ನಾಯಕತ್ವ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕೋಟದವರಾದ ಡಾ. ಶಮಂತ್ ಕುಮಾರ್ ಕೆ.ಎಸ್. ಅವರು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಯಕ್ಷಗಾನ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲಿ ನಟ ಹಾಗೂ ನಿರ್ದೇಶಕರಾಗಿಯೂ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಅವರು, ಪ್ರಸ್ತುತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೋಧನೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಸಾಮಾಜಿಕ ಸೇವೆಯನ್ನು ಸಮನ್ವಯಗೊಳಿಸಿಕೊಂಡು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.
ಈ ಸಾಧನೆಗೆ ಕೆ.ಎಲ್.ಇ. ಸಂಸ್ಥೆಯ ಬೆಳಗಾವಿಯ ನಿರ್ದೇಶಕರು, ಸ್ಥಾನಿಕ ಆಡಳಿತ ಮಂಡಳಿ ಸದಸ್ಯರು, ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಕುಲಸಚಿವರು, ಮಹಾವಿದ್ಯಾಲಯದ ಪ್ರಾಂಶುಪಾಲರು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.



