ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಪ್ರಜಾಸೇವೆ ಆಂದೋಲನದಡಿ ನವೆಂಬರ್ 7 ರಂದು ಹಾವೇರಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಾವೇರಿ ತಾಲೂಕ ತಹಶೀಲ್ದಾರ್ ಶರಣಮ್ಮ ತಿಳಿಸಿದ್ದಾರೆ.
ಹಾವೇರಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಕ್ಕರೆ ಮತ್ತು ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಹಾವೇರಿ ತಾಲೂಕಿನ ಸಾರ್ವಜನಿಕರು ನಿಗದಿತ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಅಹವಾಲುಗಳನ್ನು ಸಲ್ಲಿಸಬೇಕು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಹರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





