ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಾಗೂರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸಿ.ಎಸ್. ಹಡಪದ ಎಂಬುವವರು ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಕಳೆದ 2 ವರ್ಷದಿಂದ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹಡಪದ ಅವರು ಕಳೆದ ಒಂದು ವರ್ಷದಿಂದ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಅಧಿಕಾರ ವಹಿಸಿಕೊಂಡಿದ್ದರು ಎನ್ನಲಾಗಿದೆ.
ಶಾಲಾ ಅವಧಿಯಲ್ಲೇ ಮಧ್ಯಾಹ್ನ 3:30ರ ಸುಮಾರಿಗೆ ಶಿಕ್ಷಕರ ಕೊಠಡಿಯಲ್ಲಿ ಯಾರೂ ಇರದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಶಾಲೆ ಅವಧಿ ಮುಗಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಶಾಲೆಯಲ್ಲಿ ಶಿಕ್ಷಕನ ಆತ್ಮಹತ್ಯೆಗೆ ಸರ್ಕಾರಿ ನೌಕರರ ಸಂಘದಿಂದ ಖಂಡನೆ ವ್ಯಕ್ತವಾಗಿದ್ದು ಶಿಕ್ಷಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಆಗ್ರಹಿಸಿದ್ದಾರೆ.
ಈ ಬಗ್ಗೆ ಬಸವನಬಾಗೇವಾಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ್ ಮಾತನಾಡಿದ್ದು, “ಎರಡು ಪುಟದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಖರವಾದ ಮಾಹಿತಿ ತಿಳಿದು ಬಂದಿಲ್ಲ” ಎಂದು ಮಾಹಿತಿ ನೀಡಿದ್ದಾರೆ.
