ಕರಾವಳಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ(ಜು.25)ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ವಿವಿ ತಿಳಿಸಿದೆ.
ಜೊತೆಗೆ, ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪರೀಕ್ಷಾಂಗ ವಿಭಾಗದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆಯಲ್ಲೇ ಪರೀಕ್ಷೆಗೆ ತೆರಳಿದ್ದ ವಿದ್ಯಾರ್ಥಿಗಳು
ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿತ್ತು. ಈ ನಡುವೆ ಮಂಗಳೂರು ವಿವಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿತ್ತು. ವಿವಿಯವರು ಪರೀಕ್ಷೆ ಮುಂದೂಡಿರದ ಕಾರಣ ಪದವಿಯ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ, ಪರೀಕ್ಷೆಗೆ ಹಾಜರಾಗಬೇಕಾಗಿತ್ತು.

ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ, ಪರೀಕ್ಷಾ ಕೇಂದ್ರಗಳತ್ತ ಹೋಗುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುಂಜಾಗ್ರತಾ ಕ್ರಮವಾಗಿ ಜು.25ರಂದು ರಜೆ ಘೋಷಣೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ದ.ಕ | ಭಾರೀ ಮಳೆ : ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 25 ರ ಮಂಗಳವಾರದಂದು ರಜೆಯನ್ನು ಘೋಷಿಸಿ, ಆದೇಶ ಹೊರಡಿಸಿದ್ದಾರೆ.