ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ವಿಚಾರದ ಸಂಬಂಧ ಹೈಕೋರ್ಟ್ ಆದೇಶ ಹೊರಬಿದ್ದ ಹಿನ್ನೆಲೆಯಲ್ಲಿ ಮಾಲೂರು ಶಾಸಕ ನಂಜೇಗೌಡ ಅವರಿಗೆ ಇಡಿ ದಾಳಿ ಬಳಿಕ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
2023ರ ವಿಧಾನಸಭಾ ಚುನಾವಣೆ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ 2023ರ ಚುನಾವಣೆಯ ಮತ ಎಣಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸುವ ಸಲುವಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸ್ಟ್ರಾಂಗ್ ರೂಮ್ ಬಾಗಿಲು ಇಂದು ತೆರೆಯಲಿದ್ದು, ರಾಷ್ಟ್ರೀಯ ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ಸಮಕ್ಷಮದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನುಮತಿ ನೀಡಿದ್ದಾರೆ.
ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಿಪಿಎಂ, ಆಮ್ ಆದ್ಮಿ ಪಕ್ಷ, ಬಿ.ಎಸ್.ಪಿ.ಪಕ್ಷಗಳಿಗೆ ಮತ ಎಣಿಕೆ ಸಂದರ್ಭದಲ್ಲಿ ಹಾಜರಿರುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಪತ್ರ ಬರೆದಿದ್ದಾರೆ.
ಇದನ್ನು ಓದಿದ್ದೀರಾ?
2023ರ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕ ಕೆ ವೈ ನಂಜೇಗೌಡ 50,955 ಮತಗಳು ಮತ್ತು ಕೆ.ಎಸ್.ಮಂಜುನಾಥ್ ಗೌಡ 50,707 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಂಜೇಗೌಡ 248 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿ ಮಂಜುನಾಥ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಫಾರ್ಮ್ 17ಸಿ ದಾಖಲಾತಿಯನ್ನು ಕೊಡುವಂತೆ ಕೇಳಿತ್ತು.