ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಪ್ರಕರಣ ದಾಖಲಾಗಿ ಹಲವು ವರ್ಷಗಳ ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೊಲೀಸರ ಈ ಕಾರ್ಯವೈಖರಿ ಬಗ್ಗೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಇನ್‌ಸ್ಪೆಕ್ಟರ್ (ನಿವೃತ್ತ) ಆಗಿದ್ದ ರಂಗಸ್ವಾಮಿ ಅವರು ತಮ್ಮ ಸೇವಾವಧಿಯಲ್ಲಿ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2006ರ ಜೂನ್‌ನಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ, ಬರೋಬ್ಬರಿ ಐದು ವರ್ಷಗಳ ನಂತರ, 2011ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೂಷಾರೋಪ ಪಟ್ಟಿ ಸಲ್ಲಿಸಿದ್ದರು.
ಆ ವೇಳೆ, ರಂಗಸ್ವಾಮಿ ಅವರು ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಕರಣದಲ್ಲಿ ರಂಗಸ್ವಾಮಿ ಅವರನ್ನು ಖುಲಾಸೆಗೊಳಿಸಿತ್ತು.
ಲೋಕಾಯುಕ್ತ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು 2013ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಮೂರ್ತಿ ಎಸ್ ರಾಚಯ್ಯ ಅವರ ಪೀಠವು, ಲೋಕಾಯುಕ್ತ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ವಿಳಂಬ ಮಾಡಿದ್ದ ಲೋಕಾಯುಕ್ತ ಪೊಲೀಸರು ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದೆ.