ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳು ಮುಳುಗಡೆ, ಗುಡ್ಡ ಕುಸಿತದಿಂದ ಅನಾಹುತಗಳ ಸಂಭವಿಸಿವೆ. ಜೊತೆಗೆ ತಂಪು ವಾತಾವರಣ ಹಾಗೂ ಶೀತಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರಾಜ್ಯದ ವಿವಿಧೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಎರಡು ದಿನ ರಜೆ :
ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ 26 ಹಾಗೂ 27 ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಆದೇಶಿಸಿದ್ದಾರೆ.
ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ತಂಪು ವಾತಾವರಣ ಹಾಗೂ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಹಿತದೃಷ್ಠಿ ಮತ್ತು ರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ ಸೇರಿ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ :
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದಿರುವ ವ್ಯಾಪಕ ಮಳೆಯ ಕಾರಣ ಗೋಕಾಕ್, ಮೂಡಲಗಿ ರಾಯಬಾಗ್ ಮತ್ತು ಹುಕ್ಕೇರಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು :
ಸತತವಾಗಿ ಸುರಿಯುತ್ತಿರುವ ಮಳೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸದಂತೆ ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಜುಲೈ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮಳೆಗೆ ಶೀತಗಾಳಿ ಹೆಚ್ಚಾಗಿದ್ದು, ಮಣ್ಣು ಕುಸಿಯುವುದು, ಹಳ್ಳ ಕೊಳ್ಳಗಳು ತುಂಬು ಹರಿಯುತ್ತಿವೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗೃತೆಯಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.