ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಮನವಿ ಮಾಡಿದರು.
ತುಮಕೂರು ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾತನಾಡುತ್ತಾ ಮನವಿ ಮಾಡಿದರು.
ತುಮಕೂರು ಜಿಲ್ಲೆಯು ಅಭಿವೃದ್ಧಿಯ ಕಡೆ ದಾಪುಗಾಲು ಇಡುತ್ತಿದೆ. ಜಿಲ್ಲೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಘಟಕವನ್ನು ಸ್ಥಾಪಿಸಲು 20,000 ಎಕರೆ ಭೂಮಿಯನ್ನು ನೀಡಲಾಗಿದೆ. ಜಿಲ್ಲೆಗೆ ಮೆಟ್ರೋ ರೈಲು ಯೋಜನೆ ತರಲು ಮುಖ್ಯಮಂತ್ರಿಯವರನ್ನು ಕೇಳಿಕೊಂಡಾಗ, ಅದಕ್ಕೆ ಒಪ್ಪಿ ಕಾರ್ಯಕ್ರಮದ ವಿಸ್ತೃತ ಯೋಜನಾ ವರದಿ ತಯಾರಿಸಲು ಸೂಚಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿರುವುದರಿಂದ ಮುಂದೊಂದು ದಿನ ಜಿಲ್ಲೆಯು ವಿಶ್ವದ ಭೂಪಟದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳೊಂದಿಗೆ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸಲು ಶ್ರಮಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನರ ಆಶೋತ್ತರಗಳನ್ನು ಈಡೇರಿಸಲಾಗಿದೆ ಎಂದರು.
ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಡಿ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯಲ್ಲಿ 22ಲಕ್ಷ ಕುಟುಂಬಗಳಿಗೆ ಅನುಕೂಲವಾಗಿದ್ದು, ಇದಕ್ಕಾಗಿ 474 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಅದೇ ರೀತಿ ಶಕ್ತಿ ಯೋಜನೆಯಡಿ ಜಿಲ್ಲೆಯ 10 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 302 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ಮಾಹೆ 2,000 ರೂ.ಗಳಂತೆ 1673 ಕೋಟಿ ರೂ. ಜಮೆ ಮಾಡಲಾಗಿದ್ದು, 6ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳಿಗಿಂತ ಕಡಿಮೆ ಉಪಯೋಗಿಸುವ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್ ಒದಗಿಸಲು 284 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 7.74 ಲಕ್ಷ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡ 4924 ನಿರುದ್ಯೋಗಿಗಳಿಗೆ 8.42 ಕೋಟಿ ರೂ. ನಿರುದ್ಯೋಗಿ ಭತ್ಯೆಯನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಪಂಚ ಗ್ಯಾರಂಟಿಗಳಿಗಾಗಿ ಇದುವರೆಗೆ ರಾಜ್ಯದಲ್ಲಿ 2742 ಕೋಟಿ ರೂ.ಗಳು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ತುಮಕೂರು ನಗರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಲವು ವಾರ್ಡ್ಗಳನ್ನು ಮಾತ್ರ ಅಭಿವೃದ್ಧಿಪಡಿಸಲಾಗಿದ್ದು, ಉಳಿದ ವಾರ್ಡುಗಳನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರಲ್ಲದೆ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗೊಲ್ಲರಹಟ್ಟಿ, ಲಂಬಾಣಿತಾಂಡ, ಕಾಲೋನಿ ಸೇರಿದಂತೆ ದಾಖಲೆರಹಿತ ಜನವಸತಿ ಪ್ರದೇಶ ಗಳಲ್ಲಿ ವಾಸಿಸುವ ದುರ್ಬಲ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲು 2,000 ಹಕ್ಕು ಪತ್ರಗಳನ್ನು ಈ ಕಾರ್ಯಕ್ರಮದ ಮೂಲಕ ವಿತರಿಸಲಾಗಿದೆ. ಜಿಲ್ಲೆಯಲ್ಲಿ 522 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ, ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು 520 ಪ್ರಾಥಮಿಕ ಹಾಗೂ 450 ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.
