ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಸಮೀಪ ಭಾನುವಾರ ಆಯೋಜಿಸಿದ್ದ ವಿವಿಧ ವಸತಿ ಪಲಾನುಭವಿಗಳ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಿಸಿ ಅವರು ಮಾತನಾಡಿದರು.
2013-18ರಲ್ಲಿ ತಾವು ಸಚಿವರಾಗಿದ್ದಾಗ ತಾಲೂಕನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ 25 ಸಾವಿರ ಮನೆಗಳ ಹಕ್ಕು ಪತ್ರ ನೀಡಲಾಗಿತ್ತು, ಆದರೆ ಕಾರಣಾಂತರಗಳಿಂದ ಪೂರ್ಣಗೊಳ್ಳಲಿಲ್ಲ. ಈ ಅವಧಿಯಲ್ಲಿ ಪೂರ್ಣಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ನಮ್ಮ ಸರಕಾರ ಬಡವರ ಅಭಿವೃದ್ಧಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷೀ ಯೋಜನೆಯ ಅಡಿಯಲ್ಲಿ ಮನೆಯ ಮುಖ್ಯಸ್ಥೆಗೆ ಪ್ರತಿ ತಿಂಗಳು ಪ್ರತಿ ₹2 ಸಾವಿರ ನೀಡಲಾಗುತ್ತಿದೆ. ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಹಾಗೂ ಗೃಹ ಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತಿದೆ.
ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡುವುದು ನಮ್ಮ ಸರಕಾರದ ಮುಖ್ಯ ಉದ್ದೇಶವಾಗಿದೆʼ ಎಂದರು.
‘ತಾಲೂಕಿಗೆ ಒಟ್ಟು 8 ಸಾವಿರ ಮನೆಗಳು ಮಂಜೂರು ಆಗಿವೆ. ಅದರಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ 7 ಸಾವಿರ ಮನೆ ಮತ್ತು ಬಸವ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ 1 ಸಾವಿರ ಮನೆಗಳು ಮಂಜೂರಾಗಿವೆ. ಜನರಿಗೆ ಅವಶ್ಯಕವಿರುವ ಅನ್ನ, ವಸತಿ, ಶಿಕ್ಷಣ, ಆರೋಗ್ಯ ಮುಂತಾದವುಗಳನ್ನು ನೀಡುವ ಕೆಲಸ ನಾವು ಮಾಡುತ್ತಿದ್ದೇವೆ’ ಎಂದು ತಿಳಿಸಿದರು.
ಸಂಸದ ಸಾಗರ ಈಶ್ವರ ಖಂಡ್ರೆ ಮಾತನಾಡಿ, ‘ಮಳೆ, ಗಾಳಿ, ಬಿಸಿಲುಗಳಿಂದ ರಕ್ಷಿಸಲು ಒಂದು ಮನೆ ಅವಶ್ಯಕವಾಗಿದೆ. ಕೇವಲ ಭಾಲ್ಕಿ ಮಾತ್ರವಲ್ಲದೆ ಇಡೀ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವಸತಿ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ ₹1.20 ಲಕ್ಷ ಹಾಗೂ ಪಜಾತಿ/ಪ.ಪಂಗಡ ವರ್ಗದವರಿಗೆ ₹1.75 ಲಕ್ಷ ಮನೆ ನಿರ್ಮಾಣ ಹಣವನ್ನು ನೀಡಲಾಗುತ್ತಿದೆ. ಈ ಹಣದಲ್ಲಿ ಉತ್ತಮವಾದ ಮನೆ ನಿರ್ಮಾಣ ಕಷ್ಟವಾಗುತ್ತದೆ. ಆದ್ದರಿಂದ ಒಂದು ಮನೆ ₹5 ರಿಂದ ₹7 ಲಕ್ಷದವರೆಗೆ ಹಣ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆʼ ಎಂದು ಹೇಳಿದರು.
ʼಕೇಂದ್ರದ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಜಿಲ್ಲೆಯ ರೈಲ್ವೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪ್ರತಿ ಕುಟುಂಬಕ್ಕೂ ಮನೆ ಎಂಬುದು ಮಾನವೀಯ ಹಕ್ಕು. ಈ ಹಕ್ಕು ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಿಸಲು ಕೇಂದ್ರ ಸರಕಾರದ ಮೇಲೆ ನಿರಂತರ ಒತ್ತಡ ತಂದು ಹೆಚ್ಚಿನ ಮನೆಗಳನ್ನು ಮಂಜೂರಾತಿ ಮಾಡಿಸಿ ಅರ್ಹರಿಗೆ ವಿತರಿಸಲಾಗುತ್ತಿದೆʼ ಎಂದು ತಿಳಿಸಿದರು.
ಇದನ್ನೂ ಓದಿ : ಬೀದರ್ | ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಸಹಾಯಹಸ್ತ ಕಾರ್ಯ ಶ್ಲಾಘನೀಯ : ಭವಾನಿಸಿಂಗ್ ಠಾಕೂರ್
ಈ ಸಂದರ್ಭದಲ್ಲಿ ಭಾಲ್ಕಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನದ ಅಧ್ಯಕ್ಷ ಹಣಮಂತರಾವ ಚವ್ಹಾಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕರಾವ ಸೋನಾಜಿ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ ಸೇರಿದಂತೆ ವಸತಿ ಯೋಜನೆ ಫಲಾನುಭವಿಗಳು ಇದ್ದರು.
2019 ralli mane bill bandila