ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಸೋಮವಾರ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ. ಎಸ್. ಪೊನ್ನಣ್ಣ ಅತಿವೃಷ್ಟಿಯಿಂದ ಮನೆ ಹಾನಿ ಸಂಭವಿಸಿ ತೊಂದರೆಗೊಳಗಾಗಿರುವ ಕುಟುಂಬಗಳ ಗುರುತಿಸಿ ಉದಾರತೆಯಿಂದ ವರದಿ ನೀಡಿ, ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಮುಂಗಾರು ಆರಂಭವಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಂಪೂರ್ಣ ಮನೆ ಹಾನಿಯಾದ ಕುಟುಂಬಗಳಿಗೆ ಸರ್ಕಾರ ನೀಡುವುದು ₹1.20 ಲಕ್ಷ ರೂಪಾಯಿ ಮಾತ್ರ. ಆದ್ದರಿಂದ, ಮನೆ ಹಾನಿ ವರದಿ ನೀಡುವಾಗ ಅಧಿಕಾರಿಗಳು ಉದಾರತೆ ತೋರಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರು ಹಾಗೂ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರತೀ ಗ್ರಾಮ ಪಂಚಾಯಿತಿಗೆ ₹50 ರಿಂದ ₹75 ಸಾವಿರ ರೂಪಾಯಿ ಬಿಡುಗಡೆಗೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಲಾಗುವುದು. ಪ್ರವಾಹ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು. ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗುವುದರಿಂದ ಕಂದಾಯ, ಅರಣ್ಯ, ಪೊಲೀಸ್, ಪಂಚಾಯತ್ ರಾಜ್, ಸೆಸ್ಕ್, ಗೃಹ ರಕ್ಷಕ ದಳ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಎಂಜಿನಿಯರುಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಸ ವಿಲೇವಾರಿಗೆ ಜಾಗ ಕಾಯ್ದಿರಿಸಬೇಕು. ಜಾಗ ಇಲ್ಲದಿದ್ದಲ್ಲಿ ಕಂದಾಯ ಇಲಾಖೆಗೆ ಮನವಿ ಮಾಡಬೇಕು. ಅದರ ಪ್ರತಿಯನ್ನು ಕಳುಹಿಸಿಕೊಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ರಸ್ತೆ ಬದಿ ಕಸ ಬಿಸಾಡಬಾರದು. ರಸ್ತೆ ಬದಿ ಕಸ ಬಿಸಾಡುವವರಿಗೆ ದಂಡ ವಿಧಿಸುವಂತೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರತಿ ಹಾಡಿಗೂ ಭೇಟಿ ನೀಡಿ ಆದಿವಾಸಿ ಜನರ ಕುಂದುಕೊರತೆ ಆಲಿಸಬೇಕು. ಗುಣಮಟ್ಟದ ಪೌಷ್ಟಿಕ ಆಹಾರ ವಿತರಿಸಬೇಕು. ಮಳೆಗಾಲದಲ್ಲಿ ಆದಿವಾಸಿ ಜನರು ತುಂಬಾ ಕಷ್ಟದ ಜೀವನ ನಡೆಸುತ್ತಾರೆ. ಆದ್ದರಿಂದ, ಆದಿವಾಸಿ ಜನರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆದಿವಾಸಿ ಜನರು ವಾಸಿಸುವ ಬಸವೇಶ್ವರ ಕಾಲೋನಿಯಲ್ಲಿ ಹೆಚ್ಚಿನ ಮಳೆಯಿಂದ ರಸ್ತೆ ಸಂಪರ್ಕ ವ್ಯತ್ಯಯವಾಗಿ ತೊಂದರೆಗೆ ಸಿಲುಕಿದ್ದರು. ಇಂತಹ ಕಡೆಗಳಿಗೆ ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ ಸರಿಪಡಿಸುವಂತಾಗಬೇಕು. ಎಂದು ಹೇಳಿದರು.

ಈ ಬಾರಿ ಮೇ ತಿಂಗಳಲ್ಲಿ ದಾಖಲೆಯ ಮಳೆಯಾಗಿದೆ. ವ್ಯಾಪಕ ಮಳೆ ಹಾಗೂ ಬಿರುಗಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು. ರಸ್ತೆ ಬದಿ ಹಳೇ ಮರಗಳನ್ನು ತೆರವುಗೊಳಿಸುವಂತಾಗಬೇಕು.
ವಿದ್ಯುತ್ ಕಂಬಗಳ ಬಗ್ಗೆಯೂ ಸಹ ಎಚ್ಚರವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು. ಕಾಡಾನೆ ಹಾವಳಿ ತಡೆಯಬೇಕು. ಕಾಡಂಚಿನ ಪ್ರದೇಶಗಳಲ್ಲಿ ಯಾರೂ ಸಹ ಜೀವ ಭಯದಿಂದ ಬದುಕಬಾರದು. ನಾಗರಿಕರ ರಕ್ಷಣೆ ಆಗಬೇಕು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಗಮನಹರಿಸಬೇಕು. ಶಾಲೆಗಳು ಆರಂಭವಾಗಿದ್ದು, ಅಂಗನವಾಡಿ ಮತ್ತು ಶಾಲಾ – ಕಾಲೇಜು ಕಟ್ಟಡಗಳು ಸುಸ್ಥಿತಿಯಲ್ಲಿವೆಯೇ ಎಂದು ಗಮನಹರಿಸಬೇಕು. ಶಿಥಿಲಗೊಂಡಿರುವ ಕಟ್ಟಡಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಮಾತನಾಡಿ ಈ ಬಾರಿ 28 ಹಳೇ ಮರಗಳನ್ನು ತೆರವುಗೊಳಿಸಲಾಗಿದೆ. ಹಳೇ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಆಕ್ಷೇಪ ಇರುವುದಿಲ್ಲ ಎಂದರು.
ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್ ಮಾತನಾಡಿ ಪೊನ್ನಂಪೇಟೆ ತಾಲ್ಲೂಕಿನಲ್ಲಿ 15 ಮನೆಗಳು ಹಾನಿಯಾಗಿದ್ದು, 12 ಭಾಗಶಃ, 3 ಮನೆಗಳು ಸಂಪೂರ್ಣ ಹಾನಿಯಾಗಿದೆ. ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
ವಿರಾಜಪೇಟೆ ತಹಶೀಲ್ದಾರ್ ಅನಂತ ಶಂಕರ ಮಾತನಾಡಿ ವಿರಾಜಪೇಟೆ ತಾಲ್ಲೂಕಿನ 14 ಮನೆಗಳು ಹಾನಿಯಾಗಿದ್ದು, 13 ಮನೆಗಳು ಭಾಗಶಃ, 01 ಮನೆ ಸಂಪೂರ್ಣ ಹಾನಿಯಾಗಿದೆ. ಮರ ಬಿದ್ದು ಇಬ್ಬರ ಪ್ರಾಣ ಹಾನಿಯಾಗಿದೆ, ಪರಿಹಾರ ವಿತರಿಸಲಾಗಿದೆ ಎಂದರು.
ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳಾದ ಸುರೇಶ್ ಹಾಗೂ ಸತೀಶ್ ಮಾಹಿತಿ ನೀಡಿ ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ತಲಾ 300 ಕ್ಕೂ ಹೆಚ್ಚು ಕಂಬಗಳು ಹಾನಿಯಾಗಿದ್ದು, ಅದನ್ನು ಸರಿಪಡಿಸಲಾಗಿದೆ. ಹಾತೂರು, ತೆರಾಲು, ಹೊಸ್ಕೇರಿ, ಬಿ.ಶೆಟ್ಟಿಗೇರಿ ಮತ್ತಿತರ ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸರಿಪಡಿಸಲಾಗುವುದು ಎಂದರು.
ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯತಿರಾಜು ಮಾತಾಡಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇದರಿಂದ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಗಮನಹರಿಸಬಹುದು. ಆರೋಗ್ಯ ಇಲಾಖೆಯಿಂದ ಲಾರ್ವಾ ಸರ್ವೆ ಮಾಡಲಾಗುತ್ತದೆ ಎಂದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಮಾತನಾಡಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.
ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ನಾಚಪ್ಪ ಮಾತನಾಡಿ ನೆಹರು ನಗರ, ಅಯ್ಯಪ್ಪ ಬೆಟ್ಟ, ಮಲೆತಿರಿಕೆ ಬೆಟ್ಟದ ಸುಮಾರು 67 ಕುಟುಂಬಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಎರಡು ಗ್ರಾಪಂಗೆ ಒಬ್ಬರಂತೆ ಪಿಡಿಒಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಪಿಡಿಒಗಳ ಸಂಖ್ಯೆ ಮತ್ತಿತರ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮವಹಿಸಲಾಗುವುದು ಎಂದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಭಿವೃದ್ಧಿ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ಹುನ್ನಾರ : ನೂರ್ ಶ್ರೀಧರ್
ತಾಪಂ.ಇಒ ಅಪ್ಪಣ್ಣ, ಸಮಗ್ರ ಗಿರಿಜನ ಕಲ್ಯಾಣ ಇಲಾಖೆಯ ತೇಜರಾಜ, ಸ್ವಚ್ಛ ಭಾರತ ಮಿಷನ್ ಯೋಜನೆಯ ಸೂರಜ್, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಬಿಂದು, ಲೋಕೋಪಯೋಗಿ ಇಲಾಖೆಯ ಎಇಇ ಲಿಂಗರಾಜು, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪ್ರಶಾಂತ್ ಸೇರಿದಂತೆ ಇನ್ನಿತರರು ಇದ್ದರು.