ಪ್ರಧಾನ ಮಂತ್ರಿಗಳ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆಸಿದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ʼವಸತಿ ಯೋಜನೆಯ ಅನುದಾನದಲ್ಲಿ ಸ್ಲಂ ಬೋರ್ಡ್ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಗುತ್ತಿಗೆದಾರರು ಭ್ರಷ್ಟಾಚಾರ ಎಸಗಿದ್ದಾರೆʼ ಎಂದು ಆರೋಪಿಸಿದರು.
ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಮುಖಂಡ ಇಂತಿಯಾಜ್ ಮಾನ್ವಿ ಮಾತನಾಡಿ, ʼಗದಗ-ಬೆಟಗೇರಿ ಅವಳಿ ನಗರದಲ್ಲಿ 863 ಮನೆ ಹಾಗೂ ಗದಗ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ನೂರಾರು ಮನೆಗಳು ನಿರ್ಮಿಸಲಾಗುತ್ತಿದೆ. ಸ್ಲಂ ಬೋರ್ಡ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ಎಸಗಿದ್ದಾರೆ. ಕಳಪೆ ಮಟ್ಟದ ಕಾಮಗಾರಿ ನಡೆಸಿ ಸರ್ಕಾರದ ಕೋಟ್ಯಾಂತರ ರೂಪಾಯಿ ಲೂಟಿ ಹೊಡೆದಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷ್ಮೇಶ್ವರದ ಬಯ್ಯಾರ್ ಸ್ಲಂ ನಿವಾಸಿಗಳ ಫಲಾನುಭವಿಗಳಿಂದ ವಂತಿಗೆ ಹಣ ಪಾವತಿಸಿಕೊಂಡ ಸ್ಲಂ ಬೋರ್ಡ್ ಅಧಿಕಾರಿಗಳು ಮನೆ ಕಾಮಗಾರಿ ಪೂರ್ಣಗೊಳಿಸದೇ ಮಂಜೂರಾದ ಅನುದಾನ ದುರ್ಬಳಕೆ ಮಾಡಿದ್ದಾರೆ. ಸ್ಲಂ ಪ್ರದೇಶಗಳ ಘೋಷಣೆ ಹಾಗೂ ಅಭಿವೃದ್ಧಿಯಲ್ಲಿ ವಿಳಂಬ ಮತ್ತು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಅಮಾನತು ಮಾಡಬೇಕುʼ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಕೆಲಸಕ್ಕೂ ಅವಕಾಶ ಕಲ್ಪಿಸಿ : ರೈತ ಸಂಘ
ಪ್ರತಿಭಟನೆಯಲ್ಲಿ ಸ್ಲಂ ನಿವಾಸಿಗಳು ಹಾಗೂ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.