ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.
ನಗರದ ಗೋಪನಕೊಪ್ಪದ ಸಂತೋಷನಗರ ರಸ್ತೆ ನಿವಾಸಿ ಶಿವರಾಜ್ ಕಮ್ಮಾರ(23) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ತಂಡವೊಂದು ಶಿವರಾಜ್‌ನನ್ನು ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದರು.
ಈ ಕೊಲೆ ಪ್ರಕರಣದ ಆರೋಪಿಗಳಾದ ಸುದೀಪ್ ರಾಯಾಪುರ, ಕಿರಣ್ ಜಟ್ಟಪ್ಪನವರ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇನ್ನುಳಿದ ಆರೋಪಿಗಳನ್ನು ಬಂಧಿಸುವುದಕ್ಕಾಗಿ ಸುದೀಪ್ ಮತ್ತು ಕಿರಣ್ ನೆಲೆಸಿದ್ದ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಇಂದು ಮುಂಜಾನೆ ಕರೆದೊಯ್ದ ವೇಳೆ ಅವರು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದರೆನ್ನಲಾಗಿದೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಬ್ಬೂರು ಗ್ರಾಮಸ್ಥರ ಕೆರೆ ತುಂಬಿಸುವ ಕಾರ್ಯ ಶ್ಲಾಘನೀಯ: ಶಿವಮೂರ್ತಿ ಶಿವಾಚಾರ್ಯ ಶ್ರೀ
ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಕೂಡಾ ಗಾಯಗೊಂಡಿದ್ದಾರೆ.
ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.