ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್ ತಂತಿ ಬೇಲಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮರಳುಕಟ್ಟೆ ಗ್ರಾಮದಲ್ಲಿ ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. ಆ ಬೇಲಿಯನ್ನು ದಾಟಲು ಯತ್ನಿಸಿದ ಕಾಡಾನೆಗೆ ವಿದ್ಯುತ್ ಸ್ಪರ್ಶಿಸಿದ್ದು, ಆನೆ ಸ್ಥಳದಲ್ಲೇ ಮೃತಪಟ್ಟಿದೆ.
ಗ್ರಾಮದ ನಿವಾಸಿ ಮಣಿ ಎಂಬುವವರ ಜಮೀನಿನಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಆನೆ ಶವವಾಗಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕಾಡಾನೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಸಾವು ಸಂಭವಿಸಿದೆ ಎಂದು ಪಶುವೈದ್ಯರು ಖಚಿತಪಡಿಸಿದ್ದಾರೆ.
ಜಮೀನಿನ ಮಾಲೀಕ ಮಣಿ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.