ಹಬ್ ಹ್ಯಾಂಡ್ ಸ್ಪೋಕ್ ಹೆಸರಿನಲ್ಲಿ ಅತಿ ಕಡಿಮೆ ದಾಖಲಾತಿ ಹೊಂದಿರುವ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಎಐಡಿಎಸ್ಒ ಚಿತ್ರಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.
ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷ ಗೋವಿಂದ ಎಳವಾರ ಮಾತನಾಡಿ, “ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಇದೇ ನೆಪವೊಡ್ಡಿ ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡಲು ಎನ್‌ಇಪಿ-2020 ನೀತಿ ತಂದಿತ್ತು. ಈ ನೀತಿಯ ಪರಿಣಾಮವಾಗಿ ಕರ್ನಾಟಕ ರಾಜ್ಯದಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಇದನ್ನು ವಿರೋಧಿಸಿ ಎಐಡಿಎಸ್ಓ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ಜಿಲ್ಲೆಯಾದ್ಯಂತ 7 ಲಕ್ಷಕ್ಕೂ ಹೆಚ್ಚು ಹಾಗೂ ರಾಜ್ಯಾದ್ಯಂತ 36 ಲಕ್ಷ ಸಹಿಗಳನ್ನು ಸಂಗ್ರಹಿಸಿ ನಡೆದ ಹೋರಾಟದಿಂದಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚವ ನಿರ್ಧಾರ ಕೈಬಿಟ್ಟಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಜಾರಿ ಮಾಡಿ, ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ನಡೆಸಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು ಅವೈಜ್ಞಾನಿಕ ಮತ್ತು ಪ್ರಜಾತಾಂತ್ರಿಕ ಜನ ವಿರೋಧಿ ನಿರ್ಧಾರವಾಗಿದೆ. ಕೂಡಲೇ ಈ ನಿರ್ಧಾರ ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳಿಗೆ ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಸಂವಿಧಾನ ಕುರಿತು ಅವಹೇಳನಾಕಾರಿ ಹೇಳಿಕೆ; ರಾಷ್ಟ್ರದ್ರೋಹ ಕೇಸ್ ದಾಖಲಿಸಲು ದಸಂಸ ಪ್ರತಿಭಟನೆ
ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ಸಿದ್ದಾರ್ಥ ತಿಪ್ಪನೋರ್, ಸದಸ್ಯರಾದ ಜೈ ಭೀಮ್ ದಾಸ್, ಮೋಹನ್ ಅಕ್ಕಿ, ಸುದೀಪ್ ನಾಲವಾರಕರ್, ಜೈ ಭೀಮ್ ಪರರ್ತುಕರ್ ಸೇರಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.