ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ತನಿಖೆ ಚುರುಕುಗೊಂಡಿದ್ದು, ಕಲಬುರಗಿ ನಗರದಲ್ಲಿ ಸಿಐಡಿ ಅಧಿಕಾರಿಗಳು ಅಭ್ಯರ್ಥಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ನಗರದ ನ್ಯೂ ಓಜಾ ಲೇಔಟ್‌ನಲ್ಲಿರುವ ಪಶುವೈದ್ಯಕೀಯ ನೇಮಕಾತಿ ಅಭ್ಯರ್ಥಿಯ ನಿವಾಸದ ಮೇಲೆ ಗುರುವಾರ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು, ಅಭ್ಯರ್ಥಿಯ ಮನೆಯಲ್ಲಿ ಲಭ್ಯವಿದ್ದ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಸಿಐಡಿ ಡಿವೈಎಸ್‌ಪಿ ಹಾಗೂ ಕಲಬುರಗಿ ಡಿವೈಎಸ್‌ಪಿ ಅಸ್ಲಾಂ ಪಾಷಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 20 ಅಧಿಕಾರಿಗಳು ಭಾಗವಹಿಸಿದ್ದರು. ಕೆಲಕಾಲ ನಿವಾಸದಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ತನಿಖೆಗೆ ಅಗತ್ಯವಾಗಬಹುದಾದ ಇತರ ಮಾಹಿತಿಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.
ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಈಗಾಗಲೇ ತನಿಖೆ ಕೈಗೊಂಡಿದ್ದು, ಅದರ ಭಾಗವಾಗಿಯೇ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಯಾದಗಿರಿ | 6 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಲು ಎಐಕೆಕೆಎಂಎಸ್ ಆಗ್ರಹ
ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಯಾವ ದಾಖಲೆಗಳು ಅಥವಾ ಸಾಕ್ಷ್ಯಗಳು ಲಭ್ಯವಾಗಿವೆ ಎಂಬುದು ಸದ್ಯ ಬಹಿರಂಗಗೊಂಡಿಲ್ಲ. ಸಿಐಡಿ ತನಿಖೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಸ್ವರೂಪ ಹಾಗೂ ಅಕ್ರಮದ ಆರೋಪಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಹೊರಬರುವ ಸಾಧ್ಯತೆಯಿದೆ.





