ಆಸ್ತಿ ವರ್ಗಾವಣೆ ಕಡತ ವಿಲೇವಾರಿಗೆ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬಲೆ ಬೀಸಿ ಬಂಧಿಸಿದ್ದಾರೆ.
ಆಸ್ತಿ ವರ್ಗಾವಣೆ ಸಂಬಂಧದ ಕಡತವನ್ನು ಅನುಮೋದಿಸಿ ದಾಖಲೆಗಳನ್ನು ಪೂರ್ಣಗೊಳಿಸಲು ಕಾರ್ಯದರ್ಶಿ ವೇದಾಂಗ್ ಅವರು ₹9,950 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ದೂರುದಾರರು ಈ ಬಗ್ಗೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಲೆ ಬೀಸಿದ್ದರು.
ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಕಾರ್ಯದರ್ಶಿ ವೇದಾಂಗ್ ಅವರು ದೂರುದಾರರಿಂದ ₹9,950 ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದರು. ಬಳಿಕ ಲಂಚದ ಹಣವನ್ನು ವಶಪಡಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದರು.
ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನ ಪ್ರಕಾರ, ದೂರುದಾರ ಸಂಜೀವ್ ಅವರ ಮಾವ ಕಿಶನ್ ಪವಾರ್ ಮೃತಪಟ್ಟಿದ್ದು, ಅವರ ಹೆಸರಿನಲ್ಲಿದ್ದ ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಜಾದಪುರ ಗ್ರಾಮದ ಸರ್ವೆ ನಂ.111/1ರ ಖುಲ್ಲಾ ನಿವೇಶನ ಸಂಖ್ಯೆ–12ನ್ನು ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಡುವಂತೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಮರಣ ಪ್ರಮಾಣಪತ್ರ, ಅಗತ್ಯ ಸ್ಟಾಂಪ್ ದಾಖಲೆಗಳು ಹಾಗೂ ಇತರೆ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರೂ, ಕಡತವನ್ನು ವಿಲೇವಾರಿ ಮಾಡಲು ಕಾರ್ಯದರ್ಶಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ದೂರಿನ ಸತ್ಯಾಸತ್ಯತೆ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು ದೂರುದಾರರಿಗೆ ರಾಸಾಯನಿಕ ಲೇಪಿತ ನೋಟುಗಳನ್ನು ನೀಡಿ ಕಾರ್ಯಾಚರಣೆ ನಡೆಸಿದರು. ಕಾರ್ಯದರ್ಶಿ ವೇದಾಂಗ್ ಅವರು ನಿಗದಿತ ಮೊತ್ತವನ್ನು ಸ್ವೀಕರಿಸಿದ ತಕ್ಷಣ ದಾಳಿ ನಡೆಸಿದ ಅಧಿಕಾರಿಗಳು ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದರು. ಬಳಿಕ ಸ್ಥಳದಲ್ಲೇ ಮಹಜರು ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದರು.
ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪವಾರ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಎಸ್‌ಕೆಎಂ ಆಗ್ರಹ
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಬಂಧನ ಮತ್ತೊಮ್ಮೆ ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರು ಯಾವುದೇ ಸರ್ಕಾರಿ ಸೇವೆಗೆ ಲಂಚ ಕೇಳಿದರೆ ಕೂಡಲೇ ಮಾಹಿತಿ ನೀಡಿ ದೂರು ಸಲ್ಲಿಸುವಂತೆ ಮನವಿ ಮಾಡಿದ್ದಾರೆ.





