ಆಳಂದ ತಾಲೂಕಿನ ರಾಜೋಳ–ಭೂಸನೂರ ತಾಂಡ ಮಾರ್ಗದಲ್ಲಿ ಬುಧವಾರ ಕೆಕೆಆರ್‌ಟಿಸಿ ಬಸ್ ಪಲ್ಟಿಯಾಗಿ 34ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ರಸ್ತೆ ಮತ್ತು ಸೇತುವೆಯ ದುಸ್ಥಿತಿಯೇ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಭೂಸನೂರ ತಾಂಡದಿಂದ ಜಿಡಗಾ ಸಂಪರ್ಕಿಸುವ ರಸ್ತೆ ಸೇತುವೆ ಅತ್ಯಂತ ಅಪಾಯಕಾರಿಯಾಗಿದ್ದು, ಹಲವು ತಿಂಗಳುಗಳಿಂದ ದುರಸ್ತಿಗೆ ಕಾಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಹಲವು ಬಾರಿ ಸಾಮಾಜಿಕ ಜಾಲತಾಣಗಳ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು, ಸೇತುವೆಯನ್ನು ತುರ್ತಾಗಿ ಪರಿಶೀಲಿಸಿ ದುರಸ್ತಿ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಯಾವುದೇ ಕ್ಷಣದಲ್ಲಿ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಮುಂಚಿತವಾಗಿಯೇ ಎಚ್ಚರಿಕೆ ನೀಡಲಾಗಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ದಲಿತ ಸಂಘರ್ಷ ಸಮಿತಿ ಭೀಮಮಾರ್ಗ: ತಾಲೂಕು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ
ಈ ನಿರ್ಲಕ್ಷ್ಯದ ಪರಿಣಾಮವೇ ಬಸ್ ಪಲ್ಟಿ ಸಂಭವಿಸಿ 34ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು, ರಸ್ತೆ ಮತ್ತು ಸೇತುವೆಯನ್ನು ತಕ್ಷಣ ದುರಸ್ತಿಪಡಿಸಿ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.





