ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಮಾಲಿನ್ಯದಿಂದ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ನೀರಿನ ಟ್ಯಾಂಕ್‌ನಲ್ಲಿ ಎರಡು ಸತ್ತ ಹಲ್ಲಿಗಳು ಪತ್ತೆಯಾಗಿದ್ದು, ಇದೇ ಅಸ್ವಸ್ಥತೆಗೆ ಕಾರಣವಾಗಿರುವ ಸಾಧ್ಯತೆ ವ್ಯಕ್ತವಾಗಿದೆ.
ಜೂನ್ 15ರಂದು ಬೆಳಿಗ್ಗೆ ವಿದ್ಯಾರ್ಥಿಗಳು ಚಹಾ ಸೇವಿಸುವ ವೇಳೆ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ನಡೆಸಿದಾಗ ಫಿಲ್ಟರ್ ಟ್ಯಾಂಕ್‌ನಲ್ಲಿ ಎರಡು ಸತ್ತ ಹಲ್ಲಿಗಳು ಕಂಡುಬಂದಿವೆ. ಈ ನೀರನ್ನು ಸೇವಿಸಿದ್ದ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿ ಸೇರಿದಂತೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಒಟ್ಟು 20 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ ಇಬ್ಬರನ್ನು ಒಳರೋಗಿಗಳಾಗಿ ಹಾಗೂ ಉಳಿದ 18 ಮಂದಿಯನ್ನು ಹೊರರೋಗಿಗಳಾಗಿ ಚಿಕಿತ್ಸೆ ನೀಡಿದ ಬಳಿಕ ಬಿಡುಗಡೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಈಗ ಸುಧಾರಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಂದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯನ್ನು ವಸತಿ ನಿಲಯದಲ್ಲಿ ನಿಯೋಜಿಸಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತಿದೆ.
ಇದರ ಜೊತೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಆಹಾರ ಮತ್ತು ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಿದ್ದಾರೆ. ವಸತಿ ನಿಲಯದ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಿ ಕ್ಲೋರಿನೇಷನ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಡಿಸಿಆರ್‌ಬಿ ವಿಭಾಗದ ಪಿಎಸ್‌ಐ ಬಸವರಾಜ ಹೇರೂರ ಆತ್ಮಹತ್ಯೆ
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಮಾತನಾಡಿ, “ಪ್ರಸ್ತುತ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ” ಎಂದು ತಿಳಿಸಿದ್ದಾರೆ.





