ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದಿದ್ದ ಎನ್ನಲಾದ ಪೊಲೀಸ್ ಲಾಠಿಚಾರ್ಜ್ ಅನ್ನು ಖಂಡಿಸಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ವಿರುದ್ಧ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿ-ಯುವಜನರು, ನೀಟ್ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಬೇಡಿಕೆಗಳ ಕುರಿತು ಸಂವಾದ ನಡೆಸುವ ಬದಲು ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ’ ಎಂದು ಆಕ್ಷೇಪಿಸಿದರು.

‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿನ ಎಲ್ಲ ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದುಗೊಳಿಸಿ, ಶಿಕ್ಷಣವನ್ನು ಸಂಪೂರ್ಣ ಸರ್ಕಾರಿ ಜವಾಬ್ದಾರಿಯನ್ನಾಗಿ ಮಾಡಬೇಕು. ಶಿಕ್ಷಣದ ಖಾಸಗೀಕರಣವನ್ನು ನಿಲ್ಲಿಸಿ, ಎಲ್ಲರಿಗೂ ಉಚಿತ ಶಿಕ್ಷಣ ಒದಗಿಸಬೇಕು’ ಎಂದು ಆಗ್ರಹಿಸಿದರು.
ಇದೇ ವೇಳೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು, ನೀಟ್ ಅಕ್ರಮದಿಂದ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು, ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ ಹಾಗೂ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿಭಟನೆ ವೇಳೆ ಹಲ್ಲೆ ನಡೆಸಿದ ಮುಸುಕುಧಾರಿ ವ್ಯಕ್ತಿಗಳು ಹಾಗೂ ಅವರ ಹಿಂದಿರುವವರ ವಿರುದ್ಧವೂ ಸಮಗ್ರ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಶಹಾಪುರದಲ್ಲಿ ಬೃಹತ್ ಪ್ರತಿಭಟನೆ
ಪ್ರತಿಭಟನೆಯಲ್ಲಿ ಸಾಹಿತಿ ಆರ್.ಕೆ. ಹುಡಗಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಆರ್.ಜಿ. ಶೆಟಗಾರ್, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಮೀನಾಕ್ಷಿ ಬಾಳಿ, ಮಹಿಳಾ ಹೋರಾಟಗಾರ್ತಿ ಕೆ. ನೀಲಾ, ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ., ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ಶರ್ಮಾ, ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಸಂಚಾಲಕ ಶಿವಶರಣಪ್ಪ ಮೂಳೆಗಾಂವ್, ಡಿಎಸ್‌ಎಸ್ ಮುಖಂಡರಾದ ಮರೆಪ್ಪ ಹಳ್ಳಿ ಹಾಗೂ ಅರ್ಜುನ್ ಭದ್ರೆ, ಎಐಎಂಎಸ್‌ಎಸ್ ಜಿಲ್ಲಾ ಅಧ್ಯಕ್ಷೆ ಗುಂಡಮ್ಮ ಮಡಿವಾಳ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಪದ್ಮಣಿ ಕಿರಣಗಿ, ಎಐಡಿವೈಓ ಜಿಲ್ಲಾ ಅಧ್ಯಕ್ಷ ಜಗನ್ನಾಥ್ ಎಸ್.ಎಚ್., ಡಿವೈಎಫ್‌ಐ ರಾಜ್ಯ ಸಂಚಾಲಕ ಲವಿತ್ರ ವಸ್ತದ್, ಐಎನ್‌ಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ ಘೋಳಿ, ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಸರ್ವೇಶ್, ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ತುಳಜಾರಾಮ್ ಎನ್.ಕೆ., ಡಾ. ಸೀಮಾ ದೇಶಪಾಂಡೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ವಿದ್ಯಾರ್ಥಿಗಳು ಭಾಗವಹಿಸಿದರು.





