ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಕಾರ್ಯ ಸ್ಥಗಿತಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಕಾಳಗಿ ತಾಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ಕಾಳಗಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ರೈತರು ಹಸಿರು ಶಾಲು ಧರಿಸಿ ಎತ್ತಿನಬಂಡಿ ಹಾಗೂ ಟ್ರ್ಯಾಕ್ಟರ್ಗಳೊಂದಿಗೆ ಬಸವೇಶ್ವರ ವೃತ್ತದಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ರೈತರ ಸಮಸ್ಯೆಗಳತ್ತ ಗಮನ ಹರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತ ಮುಖಂಡರು ಮಾತನಾಡಿ, ಸಮರ್ಪಕ ಮಳೆಯಾಗದ ಕಾರಣ ಬಿತ್ತನೆ ಕಾರ್ಯ ಆರಂಭವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಈಗಾಗಲೇ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿರುವ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಬರ ಪರಿಸ್ಥಿತಿಯನ್ನು ಪರಿಗಣಿಸಿ ರೈತರಿಗೆ ಮಧ್ಯಂತರ ಪರಿಹಾರ ಘೋಷಿಸಬೇಕು ಹಾಗೂ ಬೆಳೆ ಸಾಲ ಮರುಪಾವತಿಗೆ ಅವಧಿ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ
ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಮುಖಂಡ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು. ಬೇಡಿಕೆಗಳನ್ನು ಸರ್ಕಾರ ಶೀಘ್ರ ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.





