ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 37 ಸಾವಿರ ವಿವಿಧ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಭರವಸೆ ನೀಡಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನದ ಅಂಗವಾಗಿ ಮಹೇಂದ್ರ ಫೌಂಡೇಷನ್ ವತಿಯಿಂದ ನಗರದ ಪತ್ರಿಕಾ ಭವನದ ಸಾಂಸ್ಕೃತಿಕ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಜನಕಲ್ಯಾಣ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕಕ್ಕೆ ಯಾವುದೇ ಕಾರಣಕ್ಕೂ ಮಲತಾಯಿ ಧೋರಣೆ ತೋರಲು ಅವಕಾಶ ನೀಡುವುದಿಲ್ಲ. ಈ ಭಾಗದ ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಹಾಗೂ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನ ಸೆಳೆಯಲಾಗುವುದು ಎಂದರು.
2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೋಷಿತರ ಅಭಿವೃದ್ಧಿ ಕುರಿತು ವಿಶೇಷ ಉಪನ್ಯಾಸ ನೀಡಿದ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಯೋಜನಾ ಇಲಾಖೆಯ ನಿರ್ದೇಶಕ ಡಿ. ಚಂದ್ರಶೇಖರಯ್ಯ, ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರಗಳು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದ್ದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗುತ್ತಿಲ್ಲ. ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ ಅಡ್ಡಿಯಾಗುತ್ತಿದೆ. ಶೋಷಿತ ಸಮುದಾಯಗಳು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ, ಸಾಮಾಜಿಕ ಅರಿವು, ಒಗ್ಗಟ್ಟು ಮತ್ತು ರಾಜಕೀಯ ಅಧಿಕಾರ ಅಗತ್ಯ ಎಂದು ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಅಂಗವಾಗಿ ವಿವಿಧ ಶಾಲಾ-ಕಾಲೇಜುಗಳ ಬಡ ವಿದ್ಯಾರ್ಥಿನಿಯರಿಗೆ ನೋಟ್‌ಬುಕ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಾಂಗಾವ್ ಕ್ರಾಸ್ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ವಿಜಯಕುಮಾರ ಸಾಲಿಮನಿ, ಎಂ.ಎಸ್. ಇರಾಣಿ ಕಾಲೇಜಿನ ಪ್ರಾಂಶುಪಾಲ ಐ.ಕೆ. ಪಾಟೀಲ್, ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್ ಸೇರಿದಂತೆ ಹಲವು ಸಾಧಕರನ್ನು ಸನ್ಮಾನಿಸಲಾಯಿತು.
ಇದನ್ನು ಓದಿದ್ದೀರಾ? ಕಲಬುರಗಿ | ಶೋಷಿತರು, ದಮನಿತರ ನೋವಿಗೆ ಸಾಹಿತ್ಯ ಧ್ವನಿಯಾಗಲಿ: ಡಾ. ಖಾಜಾವಲಿ ಈಚನಾಳ
ವೇದಿಕೆಯಲ್ಲಿ ಮಹೇಂದ್ರ ಫೌಂಡೇಷನ್ ಅಧ್ಯಕ್ಷೆ ಜ್ಯೋತಿ ಚಂದ್ರಶೇಖರ ದೊಡ್ಡಮನಿ, ಕೆಕೆಆರ್‌ಟಿಸಿ ವಿಭಾಗೀಯ ಸಂಚಾರಿ ಅಧಿಕಾರಿ ಈಶ್ವರ ಹೊಸಮನಿ, ಕುಡಾ ಮಾಜಿ ಸದಸ್ಯ ಶ್ಯಾಮ್ ನಾಟೀಕಾರ್, ಮಾಜಿ ಉಪಮೇಯರ್ ಬಾಬು ವಂಟಿ, ನಿವೃತ್ತ ಸೂಪರಿಂಟೆಂಡಿಂಗ್ ಎಂಜಿನಿಯರ್ ಸುರೇಶ ಎಲ್. ಶರ್ಮಾ, ಡಾ. ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ಚಂದ್ರಶೇಖರ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಪಿಲ್ ನಿರೂಪಿಸಿದರು. ಶರಣಬಸವ ಹೆಗ್ಗೆಡೆ ಸ್ವಾಗತಿಸಿದರು. ಕಾಶಿನಾಥ ಮುಖರ್ಜಿ ವಂದಿಸಿದರು.




