ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನೀಡಿದರು.
ʼಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಗಳಿದ್ದು, ಅಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸಬೇಕು. ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳ ಕುರಿತು ನಗರ ಪೊಲೀಸ್ ಆಯುಕ್ತರು ಹಾಗು ಜಿಲ್ಲಾ ಎಸ್ ಪಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಬೇಕೆಂದುʼ ಎಂದು ತಿಳಿಸಿದರು.
“ಗ್ರಾಮೀಣ ಭಾಗದ ಬಹುತೇಕ ಜನರು ಒಮ್ಮೆಯೂ ಪೊಲೀಸ್ ಠಾಣೆಗೆ ಬಂದಿರುವುದಿಲ್ಲ. ಸಮಸ್ಯೆ ಹೇಳಿಕೊಂಡು ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪೋಕ್ಸೋದಂತಹ ಗಂಭೀರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ಸಿವಿಲ್ ಸ್ವರೂಪದ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯವರ್ತಿಗಳಂತೆ ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಅಂತಹ ಅಧಿಕಾರಿಗಳು ತಮ್ಮ ನಡೆಯನ್ನು ಸರಿಪಡಿಸಿಕೊಳ್ಳಬೇಕು. ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದರು.
“ಇತ್ತೀಚಿಗೆ ನಗರದಲ್ಲಿ ನಡೆದ ಚಿನ್ನಾಭರಣ ಅಂಗಡಿಯ ದರೋಡೆ ಹಾಗೂ ಅಕ್ರಮ ನೇಮಕಾತಿ ಪ್ರಕರಣವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಇದರಿಂದ ಜಿಲ್ಲೆಗೆ ಕೀರ್ತಿ ಹೆಚ್ಚಲಿದೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ನಿರ್ದೇಶನ ನೀಡಿದರು.
ಇದನ್ನೂ ಓದಿ : ಯಾದಗಿರಿ | ಹಳೆ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಜಗದೀಶ್ ಗುತ್ತೇದಾರ, ಚಿಂಚೋಳಿ ಶಾಸಕ ಅವಿನಾಶ್ ಜಾದವ್, ಪೊಲೀಸ್ ವರಿಷ್ಠಾಧಿಕಾರಿ ಆಡ್ಡೂರು ಶ್ರೀನಿವಾಸಲು, ಪೊಲೀಸ್ ಆಯುಕ್ತರು ಶರಣಪ್ಪ ಎಸ್. ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.