ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ವಿರುದ್ಧ ಕಬ್ಬು ಬೆಳೆಗಾರರು ಹೋರಾಟದ ಹಾದಿ ಹಿಡಿದಿದ್ದಾರೆ. ಕಬ್ಬಿಗೆ ಪ್ರತಿ ಟನ್‌ಗೆ ₹3,600 ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ವಿವಿಧ ರೈತ, ಕನ್ನಡಪರ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಒಗ್ಗೂಡಿ ಹೋರಾಟಕ್ಕೆ ಧುಮುಕಿವೆ. ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ), ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚುನ್ನಪ್ಪ ಪೂಜಾರಿ ಮತ್ತು ಕೋಡಿಹಳ್ಳಿ ಚಂದ್ರಶೇಖರ್ ಬಣ), ಭಾರತೀಯ ಕೃಷಿ ಸಮಾಜ (ನವದೆಹಲಿ) ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಹೋರಾಟದ ನೇತೃತ್ವ ವಹಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ನಾರಾಯಣಪುರ ಎಡ, ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ
ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ವಿವಿಧ ಭಾಗಗಳಿಂದ ರೈತರು ನಾಗರಹಳ್ಳಿಗೆ ಆಗಮಿಸಿ ಧರಣಿಯಲ್ಲಿ ಭಾಗವಹಿಸಿದ್ದಾರೆ. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಮತ್ತು ಅವರ ಬೇಡಿಕೆಗಳಿಗೆ ನ್ಯಾಯ ಒದಗಿಸಲು ಕಾರ್ಖಾನೆ ಆಡಳಿತ ಮಂಡಳಿ ಮುಂದಾಗಬೇಕು ಎಂಬುದು ಹೋರಾಟಗಾರರ ಪ್ರಮುಖ ಒತ್ತಾಯವಾಗಿದೆ. ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯುವವರೆಗೆ ಹಗಲು-ರಾತ್ರಿ ಧರಣಿ ಮುಂದುವರಿಸುವ ನಿರ್ಧಾರವನ್ನು ಸಂಘಟನೆಗಳ ಒಕ್ಕೂಟ ಕೈಗೊಂಡಿದೆ.






