ಕಲ್ಯಾಣ ಕರ್ನಾಟಕದ ಆಧುನಿಕ ಅಭಿವೃದ್ಧಿಯ ಚರಿತ್ರೆ ಬರೆಯುವಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರ ಮಹತ್ವದ್ದಾಗಿದ್ದು, ಅವರ ಕೊಡುಗೆಯನ್ನು ಪಕ್ಷಾತೀತವಾಗಿ ಒಪ್ಪಿಕೊಳ್ಳಬೇಕು ಎಂದು ಬೌದ್ಧ ಚಿಂತಕ ಈಶ್ವರ ಎಂ. ಇಂಗನ್ ಅವರು ಹೇಳಿದರು.
ನಗರದ ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿ ವತಿಯಿಂದ ಮಂಗಳವಾರ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಕಲ್ಯಾಣ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ’ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸಣ್ಣ ಹಳ್ಳಿಯಿಂದ ಬಂದ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿರುವುದು ಕಲ್ಯಾಣ ಕರ್ನಾಟಕದ ಯುವಜನತೆಗೆ ಸ್ಪೂರ್ತಿಯಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತಗಳನ್ನು ಅನುಸರಿಸುತ್ತಾ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿರುವ ಖರ್ಗೆ ಅವರ ಅಭಿವೃದ್ಧಿ ಯೋಜನೆಗಳಿಂದಲೇ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದೆ’ ಎಂದು ಅವರು ವಿಶ್ಲೇಷಿಸಿದರು.
ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಚಂದ್ರಶೇಖರ ಶೀಲವಂತ ಮಾತನಾಡಿ, ‘ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಕನಸಿನ ಪೀಪಲ್ಸ್ ಎಜುಕೇಷನ್ ಸೊಸೈಟಿಯನ್ನು ಕಲ್ಯಾಣ ಕರ್ನಾಟಕದಲ್ಲಿ ವಿಸ್ತರಿಸುವ ಮೂಲಕ ಬಡ, ದಲಿತ ಮತ್ತು ದಮನಿತ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಕಾರ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಆದ್ಯತೆ ನೀಡಿದ್ದಾರೆ. ಅವರ ಕನಸನ್ನು ನನಸು ಮಾಡುವ ಜವಾಬ್ದಾರಿ ಸಂಸ್ಥೆಯ ಎಲ್ಲರ ಮೇಲಿದೆ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆ.ಪಿ.ಇ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸೂರನ್ ಶಿಕ್ಷಣದ ನೈತಿಕತೆ ಮತ್ತು ಶಿಕ್ಷಕರ ಜವಾಬ್ದಾರಿಗಳ ಕುರಿತು ಮಾತನಾಡಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ರಸ್ತೆ ತಡೆ; ಸರ್ಕಾರದ ವಿರುದ್ಧ ರೈತರ ಆಕ್ರೋಶ
ಡಾ. ಅಂಬೇಡ್ಕರ್ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಪ್ಪ ಎಸ್. ಕಾಂತ ಸ್ವಾಗತಿಸಿದರು. ಡಾ. ಗಾಂಧೀಜಿ ಎಸ್. ಮೊಳೆಕರ್ ಕಾರ್ಯಕ್ರಮ ನಿರೂಪಿಸಿದರು. ಡಾ. ಹರ್ಷವರ್ಧನ್ ವಂದಿಸಿದರು. ಕಾರ್ಯಕ್ರಮದಲ್ಲಿ ಕೆ.ಪಿ.ಇ. ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ ಪ್ರಾಧ್ಯಾಪಕರು, ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.





