ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳ ತಂಡಗಳು ಕಲಬುರಗಿಯ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿವೆ.
ನಗರದ ಆನಂದ ಹೋಟೆಲ್ ಸಮೀಪದಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರ ‘ಸೂಗುರೇಶ್ವರ’ ಹೆಸರಿನ ನಿವಾಸ ಹಾಗೂ ಓಝಾ ಕಾಲೊನಿಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಕೋಬಾಳಕರ ಅವರ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಇತರ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.
ಶಿವಶಂಕರಪ್ಪ ಸಾಹುಕಾರ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಇ.ಡಿ. ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕೇಂದ್ರೀಯ ಭದ್ರತಾ ಪಡೆಗಳ ಬಿಗಿ ಭದ್ರತೆಯಲ್ಲಿ ಪರಿಶೀಲನೆ ಮುಂದುವರಿದಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಸ್ವಾಮೀಜಿಯ ಸಿನಿಮಾ ಹಾಡಿನ ವಿಡಿಯೋ ವೈರಲ್
ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ದಾಳಿಯ ವೇಳೆ ಪತ್ತೆಯಾದ ದಾಖಲೆಗಳು ಹಾಗೂ ಪರಿಶೀಲನೆಯ ಬಳಿಕವೇ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.





