ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ ಜನಪರ ವೇದಿಕೆಯ ಸೇಡಂ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಶ್ರೀಮತಿ ಶ್ರಿಯಾಂಕ್ ಎ. ಧನಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಲ್ಯಾಣ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷ ವರದಾ ಸ್ವಾಮಿ ಬಿ. ಹಿರೇಮಠ, ‘ಕಾರ್ಖಾನೆಯಿಂದ ವಿಪರೀತ ಧೂಳು ಹೊರಸೂಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಾರ್ಖಾನೆಯ ಮುಂಭಾಗದ ಮುಖ್ಯ ರಸ್ತೆಯಲ್ಲಿ ಲಾರಿಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಅಲ್ಲದೆ, ಕಮಲಾವತಿ ನದಿಗೆ ಕಲುಷಿತ ನೀರು ಬಿಡಲಾಗುತ್ತಿದೆ ಎಂಬ ಆರೋಪಗಳಿದ್ದು, ಈ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಸೇಡಂ ನಗರದಲ್ಲಿರುವ ಕಾರ್ಖಾನೆಗೆ ಸಂಬಂಧಿಸಿದ ರೈಲ್ವೆ ಹಳಿಯನ್ನು ಸ್ಥಳಾಂತರಿಸಬೇಕು ಹಾಗೂ ಸ್ಥಳೀಯ ಯುವಕರಿಗೆ ಕಾರ್ಖಾನೆಯಲ್ಲಿ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂಬ ಬೇಡಿಕೆಗಳನ್ನೂ ಅವರು ಮುಂದಿಟ್ಟರು.
ಇದನ್ನು ಓದಿದ್ದೀರಾ? ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ
ಕಾರ್ಖಾನೆಯಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಿ ಸಾರ್ವಜನಿಕರ ಹಿತ ಕಾಪಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮುಂಭಾಗದಲ್ಲಿ ಹಾಗೂ ತಹಸೀಲ್ದಾರ್ ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಕಲ್ಯಾಣ ಜನಪರ ವೇದಿಕೆಯ ತಾಲೂಕು ಘಟಕ ಎಚ್ಚರಿಕೆ ನೀಡಿದೆ.





