ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಚಿತ್ತಾಪುರ ತಾಲೂಕಿನ ಕೊಂಚೂರ ಗ್ರಾಮದ ನಿವಾಸಿ ಆಂಜನೇಯ ಭೀಮಾಶಂಕರ ಒಡೆಯರ ಶಿಕ್ಷೆಗೆ ಗುರಿಯಾದ ಆರೋಪಿ. ವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.
ಆರೋಪಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ತನ್ನೊಂದಿಗೆ ಕರೆದೊಯ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ನಂತರ ವಿವಿಧ ಸ್ಥಳಗಳಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿರಿಸಿ ಕಿರುಕುಳ ನೀಡಿರುವುದೂ ತನಿಖೆಯಲ್ಲಿ ದೃಢಪಟ್ಟಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಸಂಗ್ರಹಿಸಿದ ವೈದ್ಯಕೀಯ ದಾಖಲೆಗಳು, ಸಾಕ್ಷಿದಾರರ ಹೇಳಿಕೆಗಳು ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯ ಪರಿಗಣಿಸಿತು. ವಿಚಾರಣೆ ವೇಳೆ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೋಕ್ಸೋ ನ್ಯಾಯಾಲಯ-ಎಫ್‌ಟಿಎಸ್‌ಸಿ-1) ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದ್ದು, ಇತರೆ ಅಪರಾಧಗಳಿಗೂ ಪ್ರತ್ಯೇಕ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಒಟ್ಟಾರೆ ₹55 ಸಾವಿರ ದಂಡ ಪಾವತಿಸಲು ಆದೇಶಿಸಲಾಗಿದೆ.
ಸಂತ್ರಸ್ತ ಬಾಲಕಿಯ ಪುನರ್ವಸತಿಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ₹5 ಲಕ್ಷ ಪರಿಹಾರಧನ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಇದನ್ನು ಓದಿದ್ದೀರಾ? ಕೈಕೊಟ್ಟ ಮುಂಗಾರು: ಮಳೆಗಾಗಿ ಜಾನಪದ ಸಂಪ್ರದಾಯಗಳಿಗೆ ಜೀವ ತುಂಬುತ್ತಿರುವ ರೈತರು
ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.





