ನಂದಿಕೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸಿಸಿ ರಸ್ತೆಯನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಭಾನುವಾರ ಉದ್ಘಾಟಿಸಿದರು.
ಗೊಂದಲಿ ಸಮುದಾಯದ ತುಳಜ ಭವಾನಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪವನಕುಮಾರ್ ವಳಕೇರಿ, ‘ಆಷಾಢ ಮಾಸದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮುದಾಯದ ಬಹುಕಾಲದ ಬೇಡಿಕೆಯಾಗಿದ್ದ ಸಿಸಿ ರಸ್ತೆ ನಿರ್ಮಾಣಗೊಂಡಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು. ರಸ್ತೆ ನಿರ್ಮಾಣಕ್ಕೆ ಸಹಕರಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಗೊಂದಲಿ ಸಮುದಾಯದ ಪರವಾಗಿ ಕೃತಜ್ಞತೆ’ ಸಲ್ಲಿಸಿದರು.
‘ಗ್ರಾಮದಲ್ಲಿ ನಡೆಯುವ ತುಳಜ ಭವಾನಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಕಾರ್ಯಕ್ರಮಗಳು ನಡೆಯಲಿವೆ’ ಎಂದು ತಿಳಿಸಿದರು.

ಸಿಸಿ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ್, ‘ಗ್ರಾಮದ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಸ್ಥಳೀಯ ಮುಖಂಡರು ಹಾಗೂ ಪೊಲೀಸ್ ಮಲ್ಲಣ್ಣಗೌಡ ಅವರ ನಿರಂತರ ಪ್ರಯತ್ನದಿಂದ ಈ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ’ ಎಂದು ಹೇಳಿದರು.
‘ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಂದಿಕೂರ ಗ್ರಾಮದ ಉಳಿದ ಮೂಲಸೌಕರ್ಯಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದ ಅವರು, ಉತ್ತಮ ಮಳೆಯಾಗಿ ರೈತರಿಗೆ ಸಮೃದ್ಧ ಬೆಳೆ ದೊರೆಯಲಿ ಹಾಗೂ ಎಲ್ಲರ ಜೀವನ ಸುಖ-ಸಮೃದ್ಧಿಯಿಂದ ಕೂಡಿರಲಿ’ ಎಂದು ಶುಭ ಹಾರೈಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ದಾರಿದೀಪ ದುರಸ್ತಿಗೆ ಸಾರ್ವಜನಿಕರ ಒತ್ತಾಯ
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಗೊಂದಲಿ ಸಮುದಾಯದ ಮುಖಂಡರು, ಸಾರ್ವಜನಿಕರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.





