ನಗರದ ಹೊರವಲಯದ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ವೇಗವಾಗಿ ಬರುತ್ತಿದ್ದ ಲಾರಿಯು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿಸಿಪಿ ಶಾಲೂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಲಕಾಲ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದರೂ, ಪೊಲೀಸರು ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿಯಾದರೂ ರೈತರ ಸಾಲಮನ್ನಾ ಮಾಡಿ: ಶಾಸಕ ಶರಣಗೌಡ ಕಂದಕೂರು
ಈ ಸಂಬಂಧ ಟ್ರಾಫಿಕ್–1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





