ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಸಂಜೆ ಅಂಬೇಡ್ಕರ್ ಭವನದಿಂದ ಬಿಜಾಪುರ ಕ್ರಾಸ್‌ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಬಳಿಕ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯಲ್ಲಿ ಎಸ್ಐಆರ್ ಪ್ರಕ್ರಿಯೆ ಬಡವರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ವಲಸೆ ಕಾರ್ಮಿಕರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಸಾಧ್ಯತೆ ಇದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು. ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕಿಗೆ ಧಕ್ಕೆಯಾಗುವ ರೀತಿಯಲ್ಲಿ ಹುಟ್ಟು ಪ್ರಮಾಣಪತ್ರ ಹಾಗೂ ಪೂರ್ವಿಕರ ದಾಖಲೆಗಳನ್ನು ಕೇಳುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ರಾಜಕೀಯ ಪಕ್ಷಗಳು, ದಲಿತ ಸಂಘಟನೆಗಳು ಹಾಗೂ ನಾಗರಿಕ ಸಮಾಜದೊಂದಿಗೆ ಸಮರ್ಪಕ ಚರ್ಚೆ ನಡೆಸದೆ ಎಸ್‌ಐಆರ್ ಜಾರಿಗೊಳಿಸಲಾಗಿದೆ ಎಂದು ದೂರಿದ ಅವರು, ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಬೇಕು. ಎಸ್‌ಐಆರ್ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಹಾಗೂ ದಾಖಲೆಗಳ ಕೊರತೆಯಿಂದ ಯಾವುದೇ ಅರ್ಹ ಬಡ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು
This video cannot be played in your browser. Open the video directly

ನಂತರ ತಾಲೂಕು ದಂಡಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.





