ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯಡ್ರಾಮಿ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಹಾಗೂ ಕಾರ್ಯದರ್ಶಿಯಾಗಿದ್ದ ಹಾಜಿಮಲಂಗ ಗಣಿಯಾರ (45) ಅವರಿಗೆ ಕಲಬುರಗಿ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ವಿಶೇಷ ಪೋಕ್ಸೋ ನ್ಯಾಯಾಲಯದ ಎಫ್‌ಟಿಎಸ್‌ಸಿ 1ರ ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಪ್ರಕರಣದ ವಿಚಾರಣೆ ನಡೆಸಿ, ಅಭಿಯೋಜನಾ ಪಕ್ಷದ ಜಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ಬಳಿಕ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿದರು.
ಪೋಕ್ಸೋ ಕಾಯ್ದೆಯ ಕಲಂ 6ರಡಿ ಆರೋಪಿಗೆ 25 ವರ್ಷಗಳ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಆರು ತಿಂಗಳ ಸಾಧಾರಣ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ. ಇದೇ ಕಾಯ್ದೆಯ ಕಲಂ 10ರಡಿ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದ್ದು, ದಂಡ ಪಾವತಿಸದಿದ್ದಲ್ಲಿ ಮತ್ತೆ ಆರು ತಿಂಗಳ ಸಾಧಾರಣ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.
ಇದಲ್ಲದೆ, ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ₹6 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ತೀರ್ಪು ಪ್ರಕಟವಾದ ದಿನದಿಂದ ಒಂದು ತಿಂಗಳೊಳಗೆ ಪರಿಹಾರದ ಮೊತ್ತವನ್ನು ಬಾಲಕಿಗೆ ನೀಡಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಮುಚ್ಚಿರುವ ಕೂಸಿನ ಮನೆಗಳನ್ನು ಕೂಡಲೇ ಪುನರಾರಂಭಿಸಲು ಎಐಎಂಎಸ್‌ಎಸ್ ಒತ್ತಾಯ
ಈ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.





