ಜಿಲ್ಲೆಯ ತೀವ್ರ ಬರ ಪರಿಸ್ಥಿತಿಯನ್ನು ಗಮನಿಸಿ ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಹಾಗೂ ರೈತರಿಗೆ ಸಮರ್ಪಕ ಪರಿಹಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನೇತೃತ್ವದಲ್ಲಿ ರೈತ ಸಂಘಟನೆಗಳ ಕಾರ್ಯಕರ್ತರು ನಗರದ ಶಹಾಬಾದ್ ರಿಂಗ್‌ರೋಡ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಬಳಿಕ ರಾಷ್ಟ್ರಪತಿ, ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಕೆಎಂ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ, ‘ಕಲಬುರಗಿ ಜಿಲ್ಲೆಯ ಆರ್ಥಿಕತೆ ತೊಗರಿ ಸೇರಿದಂತೆ ವಾಣಿಜ್ಯ ಬೆಳೆಗಳ ಮೇಲೆ ಅವಲಂಬಿತವಾಗಿದೆ. ಎಲ್-ನಿನೊ ಪರಿಣಾಮದಿಂದ ಈ ವರ್ಷ ಭೀಕರ ಬರಗಾಲದ ಛಾಯೆ ಆವರಿಸಿದ್ದು, ವಾಡಿಕೆಯಷ್ಟು ಮಳೆಯಾಗದ ಕಾರಣ ಮುಂಗಾರು ಬಿತ್ತನೆ ಕುಂಠಿತಗೊಂಡಿದೆ. ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ತೊಗರಿ ಬೆಳೆಗಳು ಹಾನಿಗೊಳಗಾಗಿದ್ದು, ಕಬ್ಬಿನ ಬೆಳೆ ಒಣಗುತ್ತಿದೆ. ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ಹೇಳಿದರು.
‘ಭೀಮಾ ನದಿ ಸಂಪೂರ್ಣ ಬತ್ತಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ತಕ್ಷಣ ಹರಿಸಬೇಕು. ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ದನಕರುಗಳಿಗೆ ಮೇವು ಕೊರತೆ ಎದುರಾಗಿದೆ. ರೈತರ ಆತ್ಮಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಅಧ್ಯಯನ ತಂಡವನ್ನು ಕಳುಹಿಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಬೇಕು’ ಎಂದು ಅವರು ಆಗ್ರಹಿಸಿದರು.
‘ಬರ ಪರಿಹಾರ ಘೋಷಣೆಯಲ್ಲಿ ಸರ್ಕಾರಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿದ ಅವರು, ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಆಗಸ್ಟ್ 17ರಂದು ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು. ಮೊದಲ ಹಂತದಲ್ಲಿ ನಗರದ ವಿವಿಧ ರಿಂಗ್‌ರೋಡ್‌ಗಳಲ್ಲಿ ಪ್ರತಿಭಟನೆ ನಡೆಸಿ, ನಂತರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಬರಪೀಡಿತ ಪ್ರದೇಶ ಘೋಷಣೆ, ಹಿಂಗಾರು ಬಿತ್ತನೆಗೆ ಉಚಿತ ಬೀಜ ಮತ್ತು ರಸಗೊಬ್ಬರ ವಿತರಣೆ, ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮರುಪಾವತಿಗೆ ಕಾಲಾವಕಾಶ ಹಾಗೂ ಸಾಲಮನ್ನಾ, ಪ್ರತಿ ಎಕರೆಗೆ ₹30 ಸಾವಿರ ಬರ ಪರಿಹಾರ, ಒಣಗಿದ ಕಬ್ಬಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ಬೆಳೆ ವಿಮೆ ಹಾಗೂ ಬಾಕಿ ವಿಮಾ ಹಣ ಬಿಡುಗಡೆ, ರೈತರ ಆತ್ಮಹತ್ಯೆಗೊಳಗಾದ ಕುಟುಂಬಗಳಿಗೆ ಪರಿಹಾರ, ಗೋಶಾಲೆ ಆರಂಭ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ 15 ಬೇಡಿಕೆಗಳನ್ನು ಈಡೇರಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಆಗ್ರಹಿಸಿ
ಇದನ್ನು ಓದಿದ್ದೀರಾ? ಯಾದಗಿರಿ | ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ ಕೆವಿಎಸ್ ಆಕ್ರೋಶ; ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಆಗ್ರಹ
ಪ್ರತಿಭಟನೆಯಲ್ಲಿ ಎಐಕೆಎಸ್ ಅಧ್ಯಕ್ಷ ಭೀಮಾಶಂಕರ ಮಾಡಿಯಾಳ, ಕೆಆರ್‌ಆರ್‌ಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ರಾಜ್ಯ ಕಾರ್ಯದರ್ಶಿ ಉಮಾಪತಿ ಪಾಟೀಲ, ಅರ್ಜುನ್ ಗೊಬ್ಬೂರು, ಎಸ್.ಆರ್. ಕೊಲ್ಲೂರು, ನಾಗಯ್ಯ ಸ್ವಾಮಿ, ಶಾಂತಾ ಸರಡಗಿ, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್. ಸೇರಿದಂತೆ ವಿವಿಧ ರೈತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.





