ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗುತ್ತಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪ್ರತಿನಿತ್ಯ ಜೀವಭಯದಲ್ಲೇ ಸಂಚರಿಸುವಂತಾಗಿದೆ. ಹಲವು ಅಪಘಾತಗಳು ಸಂಭವಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರಸ್ತೆಯಲ್ಲಿನ ದೊಡ್ಡ ದೊಡ್ಡ ಗುಂಡಿಗಳಿಂದ ದ್ವಿಚಕ್ರ ವಾಹನ ಸವಾರರು, ಪ್ರಯಾಣಿಕರು ಹಾಗೂ ಇತರ ವಾಹನ ಚಾಲಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಾತ್ರಿ ವೇಳೆ ಗುಂಡಿಗಳು ಸರಿಯಾಗಿ ಕಾಣಿಸದ ಕಾರಣ ಅಪಘಾತದ ಅಪಾಯ ಮತ್ತಷ್ಟು ಹೆಚ್ಚಾಗಿದೆ. ಈಗಾಗಲೇ ಹಲವು ಅಪಘಾತಗಳು ಸಂಭವಿಸಿದ್ದು, ವಾಹನ ಸವಾರರು ಆತಂಕದಿಂದಲೇ ಈ ರಸ್ತೆಯಲ್ಲಿ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುವ ಈ ಪ್ರಮುಖ ರಸ್ತೆಯ ದುಸ್ಥಿತಿಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಜನರ ಸುರಕ್ಷತೆಗಿಂತ ಅಧಿಕಾರಿಗಳಿಗೆ ರಸ್ತೆ ದುರಸ್ತಿ ಮುಖ್ಯವಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇದನ್ನು ಓದಿದ್ದೀರಾ? ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚುವುದರ ಜೊತೆಗೆ, ಗುಣಮಟ್ಟದ ಶಾಶ್ವತ ರಸ್ತೆ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಬೇಕು. ಮತ್ತಷ್ಟು ಅಪಘಾತಗಳು ಸಂಭವಿಸಿ ಅಮೂಲ್ಯ ಜೀವಗಳು ಬಲಿಯಾಗುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ದಲಿತ ಸೇನೆ ವಲಯ ಅಧ್ಯಕ್ಷ ಭಗವಾನ್ ಬೋಚಿನ್, ಡಿಎಂಎಸ್ ಅಧ್ಯಕ್ಷ ಕೀರ್ತಿ ಕುಮಾರ್ ಮ್ಯಾಳಗಿ ಹಾಗೂ ಪ್ರಶಾಂತ್ ದೊಡ್ಡಮನಿ ಆಗ್ರಹಿಸಿದ್ದಾರೆ.





