ಮಳೆ ಕೊರತೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಈ ಪ್ರದೇಶವನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.
ನಗರದ ಐವಾನ್-ಎ-ಶಾಹಿ ರಸ್ತೆಯ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ನಡೆದ ಧರಣಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಾದ್ಯಂತ ಮಳೆಯ ಅಭಾವದಿಂದ ಹೆಸರು, ಉದ್ದು, ತೊಗರಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆರೋಪಿಸಿದರು.
ಬರದ ಪರಿಣಾಮ ಹಲವಾರು ರೈತರು ಸಾಲದ ಹೊರೆ ಮತ್ತು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.
ಇದರ ಜೊತೆಗೆ, ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲು ಗೋಶಾಲೆಗಳನ್ನು ಆರಂಭಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಂಡು, ಬರ ಪರಿಹಾರ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | 4 ತಿಂಗಳಿಂದ ಪಿಂಚಣಿ ಸ್ಥಗಿತ: ತಕ್ಷಣ ಬಿಡುಗಡೆಗೆ ಎಐಎಂಎಸ್‌ಎಸ್ ಆಗ್ರಹ
ಪ್ರತಿಭಟನೆ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ರೈತರ ಹಿತದೃಷ್ಟಿಯಿಂದ ವಿಳಂಬ ಮಾಡದೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರ್‌ಪಿಐ ಜಿಲ್ಲಾ ಘಟಕ ಆಗ್ರಹಿಸಿತು.





