ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ ಅವರನ್ನು ವರ್ಗಾವಣೆ ಮಾಡಬೇಕು ಹಾಗೂ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆಯಿದ್ದು, ವಿದ್ಯಾರ್ಥಿಗಳಿಗೆ ಸಮರ್ಪಕ ಶೈಕ್ಷಣಿಕ ವಾತಾವರಣ ಕಲ್ಪಿಸಲಾಗುತ್ತಿಲ್ಲ. ಪ್ರಾಚಾರ್ಯರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು ಹಾಗೂ ಮಾನಸಿಕ ಒತ್ತಡ ಹೇರುತ್ತಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
‘2022-23ನೇ ಸಾಲಿನ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಗಳನ್ನು ಈವರೆಗೂ ವಿತರಿಸಿಲ್ಲ. ಕಾರಾಗೃಹ ವೀಕ್ಷಣೆಯ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ತಲಾ ₹1,000 ಹಾಗೂ ಕಾಲೇಜು ಸಮವಸ್ತ್ರಕ್ಕಾಗಿ ಕಳಪೆ ಗುಣಮಟ್ಟದ ಬಟ್ಟೆ ನೀಡಿ ತಲಾ ₹4,000 ಪಡೆಯಲಾಗಿದೆ. ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ’ ಎಂದು ದೂರಿದ್ದಾರೆ.
ಇದಲ್ಲದೆ, ‘ಕಾಲೇಜಿನಲ್ಲಿ ಹಲವು ವರ್ಷಗಳಿಂದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಆಯೋಜಿಸಿಲ್ಲ. ಪ್ರಾಚಾರ್ಯರು ಸುಮಾರು ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಡಳಿತಾತ್ಮಕ ನಿಯಮಗಳ ಬಗ್ಗೆಯೂ ಪರಿಶೀಲನೆ ನಡೆಸಬೇಕು’ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಕಾಲೇಜಿನ ಶೈಕ್ಷಣಿಕ ವಾತಾವರಣ ಸುಧಾರಿಸುವ ನಿಟ್ಟಿನಲ್ಲಿ ಎಲ್ಲ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಪ್ರಾಚಾರ್ಯರನ್ನು ಕೂಡಲೇ ವರ್ಗಾವಣೆಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ತಮ್ಮ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಮನವಿಯೊಂದಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ
ಈ ಸಂದರ್ಭದಲ್ಲಿ ಕಾನೂನು ವಿದ್ಯಾರ್ಥಿಗಳಾದ ಸಾಹೇಬ್ ಹುಸೇನ್, ಸುಧಾಕರ, ವಾಯ್.ಎಸ್. ಸಿಂದಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.




