ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಶುಕ್ರವಾರ ಜೇವರ್ಗಿ ತಾಲ್ಲೂಕಿನ ಮಿನಿ ವಿಧಾನಸೌಧ (ತಹಶೀಲ್ದಾರ್ ಕಚೇರಿ) ಎದುರು ಜೇವರ್ಗಿ, ಯಡ್ರಾಮಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ರಿಲಾಯನ್ಸ್ ಪೆಟ್ರೋಲ್ ಪಂಪ್‌ನಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಳಿಕ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ‘ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದರೆ ಅವರು ಸ್ವಯಂ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
‘ನೀಟ್ ಪರೀಕ್ಷೆಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾದ 19 ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು. ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಗಾಯಗೊಂಡ ವಿದ್ಯಾರ್ಥಿಗಳಿಗೆ ಪರಿಹಾರ ನೀಡಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಜೈಲಿಗೆ ಕಳುಹಿಸಬೇಕು’ ಎಂದು ಒತ್ತಾಯಿಸಿದರು.
ಇದೇ ವೇಳೆ, ‘ಈ ಬೆಳವಣಿಗೆಗಳ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿದ್ಯಾರ್ಥಿಗಳು, ಪಾಲಕರು ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು’ ಆಗ್ರಹಿಸಿದರು.
ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸುವುದನ್ನು ಸಹಿಸಲಾಗುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ನೀಟ್ ಅಕ್ರಮ ಖಂಡಿಸಿ ಪ್ರತಿಭಟನೆ; ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದಸಂಸ ಆಗ್ರಹ
ಪ್ರತಿಭಟನೆಯಲ್ಲಿ ಸಿದ್ರಾಮ ಕಟ್ಟಿ, ಭೀಮರಾವ್ ನಗನೂರ್, ಶ್ರಿಹರಿ, ಸಿದ್ದು ಕೆರೂರ್, ಇಬ್ರಾಹಿಂ ಪಟೇಲ್ ಯಾಳವಾರ, ರವಿಚಂದ್ರ ಗುತ್ತೇದಾರ್, ಮಹೇಶ್ ಕೋಕಿಲೆ, ಮೈನೋದ್ದಿನ್ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.





