ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಅನುಸರಿಸಿ (ಫಾಲೋ), ಅವುಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಹಾಗೂ ಅನುಮಾನಾಸ್ಪದ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮೊಹಮ್ಮದ್ ಸಮೀರ್ (23) ಬಂಧಿತ ಯುವಕ. ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಮೂಲದ ಕೆಲವು ಖಾತೆಗಳನ್ನು ಫಾಲೋ ಮಾಡುತ್ತಿದ್ದ ಸಮೀರ್, ಆ ಖಾತೆಗಳ ನಿರ್ವಾಹಕರೊಂದಿಗೆ ಸಂಪರ್ಕ ಹೊಂದಿದ್ದ ಹಾಗೂ ವಿವಿಧ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ಚಟುವಟಿಕೆಗಳ ಕುರಿತು ತನಿಖೆ ಕೈಗೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದ ಅನುಮಾನಾಸ್ಪದ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಪೈಕಿ ಒಬ್ಬ ವ್ಯಕ್ತಿಯ ಯಾವುದೇ ಅನುಮಾನಾಸ್ಪದ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.
ಮತ್ತೋರ್ವ ಮೊಹಮ್ಮದ್ ಸಮೀರ್ ವಿರುದ್ಧ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಚೆನ್ನಮ್ಮ ವಸತಿ ಶಾಲೆಯಲ್ಲಿ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ
ಆರೋಪಿಯ ಸಾಮಾಜಿಕ ಜಾಲತಾಣ ಬಳಕೆ, ಸಂಪರ್ಕ ಹಾಗೂ ಚಟುವಟಿಕೆಗಳ ಕುರಿತು ತನಿಖೆ ಮುಂದುವರಿದಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.





