“ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರ್ಕಾರ ಕೈ ಹಾಕುತ್ತಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ (ಅಪ್ಪುಗೌಡ) ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಳಂದ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಖಂಡಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಪಕ್ಷದ ಹಲವು ಮುಖಂಡರು ಭಾಗವಹಿಸಿದ್ದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದತ್ತಾತ್ರೇಯ ಪಾಟೀಲ್, “ಹಿಂದೆ ಮುಸ್ಲಿಂ ಲೀಗ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಖಮರುಲ್ ಇಸ್ಲಾಂ ಅವರು ‘ಕಲಬುರಗಿಯನ್ನು ಛೋಟಾ ಪಾಕಿಸ್ತಾನ ಮಾಡುತ್ತೇನೆ’ ಎಂದು ಹೇಳುತ್ತಿದ್ದರು. ಆಗಿನ ನಾಯಕರು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಆದರೆ ಈಗಿನ ನಾಯಕರು ಹಾಗೂ ಸರ್ಕಾರ ಮತ್ತೊಮ್ಮೆ ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಕೈ ಹಾಕುತ್ತಿದೆ” ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ವಿಡಿಯೊ ಹಾಗೂ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಸಾರ್ವಜನಿಕ ವಲಯದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿತ್ತು. ಕೆಲ ಸಂಘಟನೆಗಳು ಮತ್ತು ಕಾಂಗ್ರೆಸ್ ಮುಖಂಡರು ಈ ಹೇಳಿಕೆಯನ್ನು ಖಂಡಿಸಿದ್ದು, ಸಮಾಜದಲ್ಲಿ ವೈಮನಸ್ಸು ಉಂಟುಮಾಡುವ ಪ್ರಯತ್ನ ಎಂದು ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಝರ್ ಹುಸೈನ್ ಅವರು ಮಂಗಳವಾರ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನಲ್ಲಿ ದತ್ತಾತ್ರೇಯ ಪಾಟೀಲ್ ಅವರ ಹೇಳಿಕೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿತ್ತು.
ದೂರಿನ ಪರಿಶೀಲನೆ ನಡೆಸಿದ ಸ್ಟೇಷನ್ ಬಝಾರ್ ಠಾಣೆ ಪೊಲೀಸರು ಬುಧವಾರ ಸಂಜೆ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಭಾಷಣದ ವಿಡಿಯೊ, ಸಾರ್ವಜನಿಕರ ಪ್ರತಿಕ್ರಿಯೆಗಳು ಹಾಗೂ ಇತರೆ ದಾಖಲೆಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಕಾರ್ಮಿಕ ಸಚಿವರಾಗಿ ಸಂತೋಷ ಲಾಡ್ ಅವರನ್ನೇ ಮುಂದುವರೆಸಿ: ಮರಿಲಿಂಗ ಸಾವೂರ ಆಗ್ರಹ
ಈ ಬೆಳವಣಿಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಕರಣ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಪೊಲೀಸ್ ಇಲಾಖೆ ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.





