ಕೃಷಿ ಜಮೀನಿಗೆ ನೀರು ಹಾಯಿಸುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಪ್ರಬಲ ಜಾತಿಯವರು ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿರಣ್ ಎಂಬ ಯುವಕನ ಮೇಲೆ ಪ್ರಬಲ ಜಾತಿಯ ಮಂಜು ಮತ್ತು ಆತನ ಸಹೋದರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತ ಕಿರಣ್ ಅವರ ಕುಟುಂಬಸ್ಥರು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕ ಕಿರಣ್ ವಿಜಯಪುರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಯಡ್ರಾಮಿ ಠಾಣೆಯ ಪೊಲೀಸ್ ಅಧಿಕಾರಿ, “ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಒಬ್ಬ ಆರೋಪಿಯನ್ನು ಬಂಧಿಸಿದ್ದೇವೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.