ಕಲಬುರಗಿ ತಾಲೂಕಿನ ಸಿರನೂರು ಬಳಿ ಗುರುವಾರ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಜೇವರ್ಗಿ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಬಸ್ ಹಾಗೂ ಕಲಬುರಗಿಯಿಂದ ಹೊರಟಿದ್ದ ಮತ್ತೊಂದು ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನೊಬ್ಬ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಎದುರಿನಿಂದ ಬರುತ್ತಿದ್ದ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಒಂದು ಬಸ್‌ನ ಮುಂಭಾಗದ ಗಾಜು ಸಂಪೂರ್ಣ ಪುಡಿಪುಡಿಯಾಗಿದ್ದು, ಮತ್ತೊಂದು ಬಸ್‌ನ ಗಾಜು ಭಾಗಶಃ ಜಖಂಗೊಂಡಿದೆ. ಅಪಘಾತದಲ್ಲಿ ಒಂದು ಬಸ್‌ನ ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇನ್ನೊಂದು ಬಸ್‌ನ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತು ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.
ಇದನ್ನು ಓದಿದ್ದೀರಾ? ಯಾದಗರಿ | ಭೂಮಿ, ವಸತಿಗಾಗಿ ಆಗ್ರಹಿಸಿ ಪ್ರತಿಭಟನೆ
ಈ ಕುರಿತು ಕಲಬುರಗಿ ಸಂಚಾರಿ–1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





