ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಮರುತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟವು ಗುರುವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಎನ್‌ಎಫ್‌ಐಡಬ್ಲ್ಯೂ ಜಿಲ್ಲಾಧ್ಯಕ್ಷೆ ಪದ್ಮಾವತಿ ಎನ್ ಮಾಲಿಪಾಟೀಲ್ ಮಾತನಾಡಿ, ‘ಧರ್ಮಸ್ಥಳದ ಸುತ್ತಮುತ್ತ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವು ಹಾಗೂ ನಾಪತ್ತೆ ಪ್ರಕರಣಗಳ ತನಿಖೆಯ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಬೇಕೆಂದು’ ಒತ್ತಾಯಿಸಿದರು.
‘ಸೌಜನ್ಯಳ ತಾಯಿ ಕುಸುಮಾವತಿ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಸ್ವೀಕರಿಸಿ, ಸಿಬಿಐ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ. 2026 ಮಾರ್ಚ್ 23ರ ಈ ನಿರ್ದೇಶನವು ದೀರ್ಘಕಾಲದ ಹೋರಾಟಕ್ಕೆ ಬಲ ನೀಡಿದಂತಾಗಿದೆ’ ಎಂದು ಅವರು ಹೇಳಿದರು.
‘ತನಿಖೆಯಲ್ಲಿ ಲೋಪಗಳಿರುವುದನ್ನು ಸಿಬಿಐ ವಿಶೇಷ ನ್ಯಾಯಾಲಯವೇ 2023ರಲ್ಲಿ ಸೂಚಿಸಿದ್ದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಮರುತನಿಖೆಗೆ ಸಹಕರಿಸಿ ಯಾವುದೇ ಅಡ್ಡಿ ಉಂಟುಮಾಡಬಾರದು’ ಎಂದು ಒತ್ತಾಯಿಸಲಾಯಿತು.
This video cannot be played in your browser. Open the video directly

ಇನ್ನೊಂದೆಡೆ, ಧರ್ಮಸ್ಥಳದ ಸುತ್ತಮುತ್ತ ಸಂಭವಿಸಿದ 74 ಅಸಹಜ ಸಾವುಗಳ ಕುರಿತು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ 2026 ಮಾರ್ಚ್ 18ರಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶಕ್ಕೂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ’ ಎಂದು ತಿಳಿಸಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಪದ್ಮಿನಿ ಕಿರಣಗಿ ಮಾತನಾಡಿ, ‘ಸುಪ್ರೀಂಕೋರ್ಟ್‌ನಲ್ಲಿರುವ ಮರುತನಿಖೆ ಅರ್ಜಿಯನ್ನು ರಾಜ್ಯ ಸರ್ಕಾರ ಬೆಂಬಲಿಸಬೇಕು, 74 ಅಸಹಜ ಸಾವುಗಳ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್‌ಐಟಿ ವರದಿಗಳನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಅಕ್ರಮ ಮದ್ಯ ಮಾರಾಟ; ಕ್ರಮಕ್ಕೆ ಅಂಬೇಡ್ಕರ್ ಯುವ ಸೇನೆ ಒತ್ತಾಯ
‘ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗುವವರೆಗೆ ಈ ಹೋರಾಟ ಮುಂದುವರಿಯಲಿದೆ’ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ , ಎನ್‌ಎಫ್‌ಐಡಬ್ಲ್ಯೂ ಕಾರ್ಯದರ್ಶಿ ವಿದ್ಯಾಶ್ರೀ ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





