ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡ ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಲಬುರಗಿಯಲ್ಲಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿದೆ. ಇದೀಗ, ಮತ್ತೆ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಆ ಕ್ಯಾಂಟೀನ್‌ಗಳನ್ನು ಪುನರಾರಂಭಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಮುಬೀನ ಅಹ್ಮದ್ ಒತ್ತಾಯಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಇಂದಿರಾ ಕ್ಯಾಂಟಿನ್‌ಗಳು ಕೂಲಿ ಕಾರ್ಮಿಕರಿಗೆ, ಮಹಿಳೆಯರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಸಿವು ನೀಗಿಸುತ್ತಿದ್ದವು. ಅವುಗಳನ್ನು ಬಿಜೆಪಿ ಅಧಿಕಾರದಲ್ಲಿ ಸರಿಯಾಗಿ ನಿರ್ವಹಣೆ ಮಾಡದೆ, ಮುಚ್ಚಲಾಗಿದೆ. ಚುನಾವಣೆ ಸಮಯದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಈಗ, ಸರ್ಕಾರ ತನ್ನ ಭರವಸೆಯನ್ನು ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.
“ಇಂದಿಯಾ ಕ್ಯಾಂಟೀನ್ ಮತ್ತೆ ಆರಂಭಿಸುವ ಬಗ್ಗೆ ವೆಲ್ಫೇರ್ ಪಾರ್ಟಿ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿತ್ತು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. 30 ದಿನಗಳೊಳಗೆ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಬೇಕು. ಇಲ್ಲವಾದರೆ, ಪಾಲಿಕೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಂ.ಎ ಖದೀರ, ಸಿದ್ದಣ್ಣ ಚಕರಾ, ಮುಬೀನ ಅಹ್ಮದ್, ಸೈಯ್ಯದ ಮುನೀರ್, ಅಬ್ದುಲ ಸಲೀಂ ಇನ್ನಿತರರು ಉಪಸ್ಥಿತರಿದ್ದರು.